Tag: Core Committee Meeting

  • ನಿಗದಿತ ಅವಧಿಯಲ್ಲಿ ಉಪಚುನಾವಣೆ ನಡೆದ್ರೆ ಬಿಜೆಪಿಯವರೇ ಅಭ್ಯರ್ಥಿಗಳು: ಅರವಿಂದ್ ಲಿಂಬಾವಳಿ

    ನಿಗದಿತ ಅವಧಿಯಲ್ಲಿ ಉಪಚುನಾವಣೆ ನಡೆದ್ರೆ ಬಿಜೆಪಿಯವರೇ ಅಭ್ಯರ್ಥಿಗಳು: ಅರವಿಂದ್ ಲಿಂಬಾವಳಿ

    – ಕೋರ್ ಕಮಿಟಿ ಸಭೆ ಬಳಿಕ ಮಾಜಿ ಸಚಿವರ ಹೇಳಿಕೆ
    – ಅನರ್ಹರಿಗೆ ಶಾಕ್ ಕೊಟ್ಟ ‘ಕಮಲ ಪಡೆ’

    ಬೆಂಗಳೂರು: ನಿಗದಿತ ಅವಧಿಯಲ್ಲಿ ಉಪ ಚುನಾವಣೆ ನಡೆದರೆ ಬಿಜೆಪಿಯವರೇ ಅಭ್ಯರ್ಥಿಗಳಾಗಿ ಚುನಾವಣಾ ಕಣಕ್ಕೆ ಇಳಿಯಲಿದ್ದಾರೆ ಎಂದು ಮಾಜಿ ಸಚಿವ ಅರವಿಂದ್ ಲಿಂಬಾವಳಿ ಹೇಳಿದ್ದಾರೆ.

    ಅನರ್ಹ ಶಾಸಕರಿಗೆ ಉಪ ಚುನಾವಣೆಯ ಟಿಕೆಟ್ ನೀಡುವ ವಿಚಾರವಾಗಿ ಪಕ್ಷದೊಳಗೆ ವಿರೋಧ ಎದ್ದಿದೆ. ಈ ಹಿನ್ನೆಲೆಯಲ್ಲಿ ಬಂಡಾಯ ಶಮನಕ್ಕೆ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಬುಧವಾರ ತುರ್ತು ಕೋರ್ ಕಮಿಟಿ ಸಭೆ ಕರೆದ್ದರು. ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ನಡೆದ ಕೋರ್ ಕಮಿಟಿ ಸಭೆಯಲ್ಲಿ ಕೇಂದ್ರ ಸಚಿವ ಸದಾನಂದಗೌಡ, ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಮಾಜಿ ಸಿಎಂ ಜಗದೀಶ್ ಶೆಟ್ಟರ್, ಸಚಿವರಾದ ಆರ್.ಅಶೋಕ್, ಸಿ.ಟಿ.ರವಿ ಹಾಗೂ ಮಾಜಿ ಸಚಿವ ಅರವಿಂದ ಲಿಂಬಾವಳಿ ಸೇರಿದಂತೆ ಅನೇಕ ನಾಯಕರು ಭಾಗಿಯಾಗಿದ್ದರು.

    ಸಭೆಯ ಬಳಿಕ ಮಾತನಾಡಿದ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅರವಿಂದ್ ಲಿಂಬಾವಳಿ, ಉಪ ಚುನಾವಣೆ ಕುರಿತು ಕೋರ್ ಕಮಿಟಿ ಸಭೆಯಲ್ಲಿ ಚರ್ಚೆ ಆಗಿದೆ. ನಮ್ಮ ಸಂಘಟನೆಯಿಂದ ಚುನಾವಣೆಗೆ ಭರ್ಜರಿ ತಯಾರಿ ನಡೆದಿದೆ. ಅನರ್ಹ ಶಾಸಕರ ವಿಚಾರ ಸುಪ್ರೀಂ ಕೋರ್ಟ್ ನಲ್ಲಿದೆ. ಅವರ ಪರ ವಕೀಲರು ಚುನಾವಣೆ ಮುಂದೂಡುವಂತೆ ಕೋರ್ಟ್ ಗೆ ಮನವಿ ಮಾಡಿಕೊಂಡಿದ್ದಾರೆ. ಹೀಗಾಗಿ ಉಪ ಚುನಾವಣೆ ಬಗ್ಗೆ ಅಂತಿಮ ನಿರ್ಧಾರಕ್ಕೆ ಪಕ್ಷ ಬಂದಿಲ್ಲ ಎಂದು ತಿಳಿಸಿದರು.

    2018ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧೆ ಮಾಡಿದ್ದ ಅಭ್ಯರ್ಥಿಗಳ ವಿರೋಧದ ವಿಚಾರವಾಗಿ ಪ್ರತಿಕ್ರಿಯಿಸಿದ ಮಾಜಿ ಸಚಿವರು, ಈಗಾಗಲೇ ಕೋರ್ಟಿನಲ್ಲಿ ಉಪ ಚುನಾವಣೆ ಮುಂದೂಡಲು ಮನವಿ ಮಾಡಿದ್ದಾರೆ. ಹಾಗಾಗಿ ನಾವು ಅಭ್ಯರ್ಥಿಗಳ ಆಯ್ಕೆ ಬಗ್ಗೆ ಚರ್ಚೆ ಮಾಡಿಲ್ಲ. ಒಂದು ವೇಳೆ ನಿಗದಿತ ಸಮಯದಲ್ಲಿ ಚುನಾವಣೆ ಬಂದರೆ ನಮ್ಮ ಪಕ್ಷದ ಅಭ್ಯರ್ಥಿಗಳು ಎಲ್ಲ ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಲಿದ್ದಾರೆ. ಅದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಹೇಳಿದರು.

    ಉಪ ಚುನಾವಣೆಗೆ ಪಕ್ಷದ ಕಾರ್ಯಕರ್ತರನ್ನು ಸನ್ನದ್ಧಗೊಳಿಸಲು ಸೆಪ್ಟೆಂಬರ್ 27ರಂದು ಬೆಂಗಳೂರಿನಲ್ಲಿ ದಕ್ಷಿಣ ಕರ್ನಾಟಕದ ಉಪ ಚುನಾವಣಾ ಕ್ಷೇತ್ರಗಳ ಕಾರ್ಯಕರ್ತರ ಸಭೆ ನಡೆಸಲಾಗುತ್ತದೆ. ಬಳಿಕ ಸೆಪ್ಟೆಂಬರ್ 29ರಂದು ಹುಬ್ಬಳ್ಳಿಯಲ್ಲಿ ಉತ್ತರ ಕರ್ನಾಟಕದ ಕ್ಷೇತ್ರಗಳ ಕಾರ್ಯಕರ್ತರ ಸಭೆ ಕರೆಯಲಾಗಿದೆ. ಈ ವಿಚಾರವನ್ನು ಕೋರ್ ಕಮಿಟಿ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ತಿಳಿಸಿದರು.

  • ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಕಟೀಲ್ ಕುಟುಕಿದ ಬಿಎಸ್‍ವೈ!

    ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಕಟೀಲ್ ಕುಟುಕಿದ ಬಿಎಸ್‍ವೈ!

    ಬೆಂಗಳೂರು: ಇಂದು ನಡೆದ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ವಿರುದ್ಧ ಗರಂ ಆಗಿದ್ದಾರೆ.

    ಇಂದು ಬೆಂಗಳೂರಿನ ಬಿಜೆಪಿ ಸಭೆಯಲ್ಲಿ ನಡೆದ ಈ ಸಭೆಯಲ್ಲಿ ನಿಗಮ ಮಂಡಳಿಗಳ ನೇಮಕ ಮಾಡುವಾಗ ಪಕ್ಷದ ಗಮನಕ್ಕೆ ತನ್ನಿ ಎಂದು ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಬಿಎಸ್‍ವೈ ಗೆ ಸೂಚಿಸಿದ್ದಾರೆ. ಇದಕ್ಕೆ ಯಡಿಯೂರಪ್ಪ ಕೆಂಡಾಮಂಡಲವಾಗಿದ್ದಾರೆ ಎನ್ನಲಾಗಿದೆ.

    ಎಲ್ಲವನ್ನೂ ಪಕ್ಷದ ಗಮನಕ್ಕೆ ತಂದು ನೇಮಕ ಮಾಡಲು ಆಗಲ್ಲ. ಸಚಿವ ಸ್ಥಾನ ವಂಚಿತ ಶಾಸಕರು, ಅಸಮಾಧಾನಿತರು ಬಹಳ ಜನ ಇದ್ದಾರೆ. ಅವರನ್ನು ನಿಗಮ ಮಂಡಳಿಗಳ ನೇಮಕಕ್ಕೆ ಪರಿಗಣಿಸಬೇಕಾಗುತ್ತೆ ಎಂದ ಬಿಎಸ್‍ವೈ, ಇದೇ ವೇಳೆ ಪಕ್ಷದ ಪದಾಧಿಕಾರಿಗಳನ್ನು ನೇಮಕ ಮಾಡುವಾಗ ನಮ್ಮ ಗಮನಕ್ಕೆ ತನ್ನಿ ಎಂದು ನಳೀನ್ ಕುಮಾರ್ ಕಟೀಲ್ ಅವರಿಗೆ ವಾರ್ನಿಂಗ್ ನೀಡಿದ್ದಾರೆ ಎಂದು ತಿಳಿದು ಬಂದಿದೆ

    ಪ್ರಧಾನ ಕಾರ್ಯದರ್ಶಿ ಮಹೇಶ್ ತೆಂಗಿನಕಾಯಿ ನೇಮಕ ಮಾಡಿದ್ದಕ್ಕೆ ಗರಂ ಆದ ಬಿಎಸ್ ಯಡಿಯೂರಪ್ಪ, ಯಾರ ಗಮನಕ್ಕೂ ಬಾರದೇ ಹೇಗೆ ಪ್ರಧಾನ ಕಾರ್ಯದರ್ಶಿ ಮಾಡಿದ್ದು, ಇನ್ನು ಮುಂದೆ ಪದಾಧಿಕಾರಿಗಳ ನೇಮಕ ಮಾಡುವಾಗ ನಮ್ಮ ಗಮನಕ್ಕೆ ತನ್ನಿ ಎಂದು ಸೂಚಿಸಿದ್ದಾರೆ ಎನ್ನಲಾಗಿದೆ.

  • ರಮೇಶ್ ಜಾರಕಿಹೊಳಿ ರಾಜೀನಾಮೆ – ಬಿಜೆಪಿ ಕೋರ್ ಕಮಿಟಿ ಸಭೆಯ ಇನ್‍ಸೈಡ್ ಸ್ಟೋರಿ ಇಲ್ಲಿದೆ

    ರಮೇಶ್ ಜಾರಕಿಹೊಳಿ ರಾಜೀನಾಮೆ – ಬಿಜೆಪಿ ಕೋರ್ ಕಮಿಟಿ ಸಭೆಯ ಇನ್‍ಸೈಡ್ ಸ್ಟೋರಿ ಇಲ್ಲಿದೆ

    ಬೆಂಗಳೂರು: ಎಲ್ಲಾ ಕಡೆಯೂ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ರಾಜೀನಾಮೆ ಚರ್ಚೆಯಾಗುತ್ತಿದೆ. ಯಾವುದೇ ಕಾರಣಕ್ಕೂ ಇನ್ನು ಮುಂದೆ ದುಡುಕುವುದು ಬೇಡ. ಸರಿಯಾದ ಪ್ಲಾನ್ ರೂಪಿಸಿ ರೆಬೆಲ್ ಶಾಸಕರನ್ನು ಬಿಜೆಪಿಗೆ ಕರೆ ತರೋಣ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಪಕ್ಷದ ಪಕ್ಷದ ಮುಖಂಡರಿಗೆ ತಿಳಿಸಿದ್ದಾರೆ.

    ಬಿಎಸ್‍ವೈ ನೇತೃತ್ವದಲ್ಲಿ ಇಂದು ಬಿಜೆಪಿ ಕೋರ್ ಕಮಿಟಿ ಸಭೆ ನಡೆದಿದ್ದು, ಮಾಜಿ ಸಿಎಂ ಜಗದೀಶ್ ಶೆಟ್ಟರ್, ಸಂಸದ ಡಿ.ವಿ.ಸದಾನಂದಗೌಡ, ಮಾಜಿ ಸಚಿವ ಅರವಿಂದ ಲಿಂಬಾವಳಿ ಸೇರಿದಂತೆ ಹಲವು ಪ್ರಮುಖರು ಭಾಗಿಯಾಗಿದ್ದರು.

    ಚಿಂಚೋಳಿ ಮತ್ತು ಕುಂದಗೋಳ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಅಭ್ಯರ್ಥಿ ಆಯ್ಕೆ ಸಭೆ ನಡೆಸಲಾಗಿದೆ ಎಂದು ತಿಳಿಸಿದ್ದರೂ ರಮೇಶ್ ಜಾರಕಿಹೊಳಿ ರಾಜೀನಾಮೆ ಘೋಷಣೆಯಿಂದ ಉಂಟಾಗಿರುವ ರಾಜಕೀಯ ಅಸ್ಥಿರತೆಯ ಲಾಭ ಪಡೆಯುವ ಬಗ್ಗೆ ಭಾರೀ ಚರ್ಚೆ ನಡೆದಿದೆ ಎನ್ನುವ ವಿಚಾರ ಮೂಲಗಳಿಂದ ಪಬ್ಲಿಕ್ ಟಿವಿಗೆ ತಿಳಿದು ಬಂದಿದೆ.

    ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ರಾಜೀನಾಮೆ ಬೆನ್ನಲ್ಲೇ ಒಬ್ಬೊಬ್ಬರಾಗಿ ರಾಜೀನಾಮೆ ಕೊಡಲು ಶುರು ಮಾಡುತ್ತಾರೆ. ನಾವು ಆಪರೇಶನ್ ಕಮಲ ಮಾಡುತ್ತಿಲ್ಲ ಎಂದೇ ಮಾಧ್ಯಮಗಳ ಮುಂದೆ ವಾದಿಸಬೇಕು. ಅಪ್ಪಿತಪ್ಪಿಯೂ ಎಡವಟ್ಟು ಹೇಳಿಕೆ ನೀಡುವುದು ಬೇಡ ಎಂದು ಬಿ.ಎಸ್.ಯಡಿಯೂರಪ್ಪ ಅವರು ಪಕ್ಷ ಮುಖಂಡರಿಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

    ಸಭೆಯ ಬಳಿಕ ಮಾತನಾಡಿದ ಬಿಎಸ್‍ವೈ, ರಾಜ್ಯದ 22 ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಜಯಗಳಿಸಲಿದೆ. ಚಿಂಚೋಳಿ ಮತ್ತು ಕುಂದಗೋಳ ಉಪಚುನಾವಣೆ ಬಗ್ಗೆ ಚರ್ಚೆ ನಡೆದಿದೆ. ಅಭ್ಯರ್ಥಿಗಳ ಹೆಸರನ್ನು ಹೈಕಮಾಂಡ್‍ಗೆ ಕಳುಹಿಸಲಾಗಿದೆ. ಈ ಮೂಲಕ ನಾಳೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗುತ್ತದೆ ಎಂದರು.

    ರಮೇಶ್ ಜಾರಕಿಹೊಳಿ ರಾಜೀನಾಮೆ ವಿಚಾರದ ಬಗ್ಗೆ ನನಗೇನು ಗೊತ್ತಿಲ್ಲ. ಅವರನ್ನೇ ಕೇಳಿ ಎಂದು ಪ್ರತಿಕ್ರಿಯೆ ನೀಡಲು ಹಿಂದೇಟು ಹಾಕಿದರು.

    ಕುಂದಗೋಳ ಕ್ಷೇತ್ರಕ್ಕೆ ಜಗದೀಶ್ ಶೆಟ್ಟರ್, ಕೆ.ಎಸ್.ಈಶ್ವರಪ್ಪ, ಪ್ರಹ್ಲಾದ್ ಜೋಷಿ ಹಾಗೂ ಗೋವಿಂದ ಕಾರಜೋಳ ಅವರನ್ನು ಉಸ್ತುವಾರಿಗಳನ್ನಾಗಿ ನೇಮಿಸಲಾಗಿದೆ. ಚಿಂಚೋಳಿ ವಿಧಾನಸಭಾ ಕ್ಷೇತ್ರಕ್ಕೆ ವಿ.ಸೋಮಣ್ಣ, ಲಕ್ಷ್ಮಣ ಸವದಿ, ಬಾಬುರಾವ್ ಚಿಂಚನಸೂರ್ ಹಾಗೂ ಮಾಲೀಕಯ್ಯ ಗುತ್ತೇದಾರ್ ಉಸ್ತುವಾರಿ ವಹಿಸಿಕೊಳ್ಳುತ್ತಾರೆ ಎಂದರು.

    ಲೋಕಸಭಾ ಚುನಾವಣೆಯಲ್ಲಿ ಶೇ.68 ರಷ್ಟು ಮತದಾನ ಮಾಡಿದ ಕರ್ನಾಟಕದ ಜನತೆಗೆ ಧನ್ಯವಾದಗಳು. ಚುನಾವಣೆಯ ಬಗ್ಗೆ ಪರಿಶೀಲನೆ ನಡೆಸಿದ್ದು ಬಿಜೆಪಿ 22 ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆ ಇದೆ. ಎಲ್ಲಾ ಜಿಲ್ಲಾ ಘಟಕಗಳ ಸಮಿತಿಗಳೂ ಸಹ ವಾರದೊಳಗೆ ವಿಮರ್ಶೆ ಮಾಡಿ ವರದಿ ನೀಡುವಂತೆ ಸೂಚಿಸಲಾಗಿದೆ ಎಂದು ಅರವಿಂದ ಲಿಂಬಾವಳಿ ತಿಳಿಸಿದರು.

    ಮತದಾರರ ಪಟ್ಟಿಯಲ್ಲಿ ಹೆಸರು ಡಿಲೀಟ್ ಆಗಿರುವ ಬಗ್ಗೆ ಮಾಹಿತಿ ಸಂಗ್ರಹಿಸಿ ಚುನಾವಣಾ ಅಯೋಗಕ್ಕೆ ಸಲ್ಲಿಸಲು ಚರ್ಚೆ ನಡೆಸಲಾಗಿದೆ. ಹಾಸನದಲ್ಲಿ ಪೊಲೀಸ್ ಜೀಪ್‍ನಲ್ಲಿ ಹಣ ಸಾಗಿಸಿದ ಬಗ್ಗೆ ಹಾಗೂ ರಾಜ್ಯದಲ್ಲಿ ಚುನಾವಣಾ ಅಕ್ರಮಗಳ ಕುರಿತು ಕೋರ್ ಕಮಿಟಿ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ ಎಂದು ತಿಳಿಸಿದರು.

    ದೆಹಲಿ ಮತ್ತು ವಾರಣಾಸಿ ಸೇರಿದಂತೆ ಅನೇಕ ಲೋಕಸಭಾ ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿ ಪರ ಪ್ರಚಾರದಲ್ಲಿ ರಾಜ್ಯದ ಬಿಜೆಪಿ ಮುಖಂಡರು ಪಾಲ್ಗೊಳ್ಳುತ್ತಾರೆ. ವಾರಣಾಸಿಯಲ್ಲಿ ಶಾಸಕ ಸಿ.ಟಿ.ರವಿ ನೇತೃತ್ವದ ತಂಡವು ಪ್ರಚಾರಕ್ಕೆ ತೆರಳಲಿದೆ ಎಂದರು.

    ವಿಧಾನ ಪರಿಷತ್ ಸದಸ್ಯ ಶಶಿಲ್ ನಮೋಶಿ ಮಾತನಾಡಿ, ಚಿಂಚೋಳಿ ಕ್ಷೇತ್ರದ ಉಪಚುನಾವಣೆ ವಿಚಾರವಾಗಿ ಇಂದು ಸಭೆ ಕರೆದು ಎಲ್ಲರ ಅಭಿಪ್ರಾಯ ಪಡೆಯಲಾಗಿದೆ. ಪಕ್ಷದ ತೀರ್ಮಾನಕ್ಕೆ ಎಲ್ಲರೂ ಬದ್ಧವಾಗಿದ್ದಾರೆ. ಸುನೀಲ್ ವಲ್ಯಾಪುರೆ, ಉಮೇಶ್ ಜಾಧವ್ ಅವರು ಸೂಚಿಸಿದ ವ್ಯಕ್ತಿ, ಸಂಜೀವನ್ ಯಾಕಾಪುರ್, ರಾಮದೇವ್ ರಾಥೋಡ್ ಸೇರಿದಂತೆ 4 ಜನ ಆಕಾಂಕ್ಷಿಗಳಿದ್ದಾರೆ. ರಾಜ್ಯ ಮುಖಂಡರು ಸಭೆ ಕರೆದು ಅಭಿಪ್ರಾಯ ಸಂಗ್ರಹಿಸಿದ್ದಾರೆ ಎಂದರು.

    ಮಾಜಿ ಸಚಿವ ಸುನೀಲ್ ವಲ್ಯಾಪುರೆ ಅವರು ಮಾತನಾಡಿ, ನಾನು ಕೂಡ ಚಿಂಚೋಳಿ ಕ್ಷೇತ್ರದ ಟಿಕೆಟ್ ಆಕಾಂಕ್ಷಿ. ಪಕ್ಷಕ್ಕಾಗಿ ಹಗಲು ರಾತ್ರಿ ದುಡಿದಿದ್ದೇನೆ ಎಂದರು.

    ಚಿಂಚೋಳಿ ಟಿಕೆಟ್ ಆಕಾಂಕ್ಷಿ ಸಂಜೀವ್ ಯಾಕಾಪುರೆ ಮಾತನಾಡಿ, ನಾನು ಕೂಡ ಪ್ರಬಲ ಆಕಾಂಕ್ಷಿಯಾಗಿದ್ದೇನೆ. ನಾನು ಎಸ್‍ಸಿ ಸಮುದಾಯಕ್ಕೆ ಸೇರಿದವನು. ನನಗೆ ಟಿಕೆಟ್ ಕೊಟ್ಟರೆ ಸಮುದಾಯಕ್ಕೆ ಹೆಚ್ಚು ಒಲವು ತೋರಿದಂತೆ ಆಗುತ್ತದೆ. ಟಿಕೆಟ್ ಕೊಡುತ್ತಾರೆ ಎಂಬ ನಂಬಿಕೆ ಇದೆ ಎಂದರು.

  • ಚಂದ್ರಗ್ರಹಣದ ಬಳಿಕ ಬಿಎಸ್‍ವೈ ಫುಲ್ ಆ್ಯಕ್ಟಿವ್ – ದೋಸ್ತಿ ಸರ್ಕಾರದ ವಿರುದ್ಧ ಬಿಜೆಪಿ ರಣತಂತ್ರ

    ಚಂದ್ರಗ್ರಹಣದ ಬಳಿಕ ಬಿಎಸ್‍ವೈ ಫುಲ್ ಆ್ಯಕ್ಟಿವ್ – ದೋಸ್ತಿ ಸರ್ಕಾರದ ವಿರುದ್ಧ ಬಿಜೆಪಿ ರಣತಂತ್ರ

    ಬೆಂಗಳೂರು: ಚಂದ್ರಗ್ರಹಣದ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ವೈ ಯಡಿಯೂರಪ್ಪ ಫುಲ್ ಆ್ಯಕ್ಟಿವ್ ಆಗಿದ್ದಾರೆ. ಲೋಕಸಭೆ ಚುನಾವಣೆಗೆ ಸಮ್ಮಿಶ್ರ ಸರ್ಕಾರದ ವಿರುದ್ಧ ಹೋರಾಟಕ್ಕೆ ಬಿಜೆಪಿ ಸಜ್ಜಾಗಿದೆ.

    ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಹೋರಾಟಕ್ಕೆ ತಯಾರಿ ಬಗ್ಗೆ ಚರ್ಚೆ ನಡೆಸಲಾಗಿದೆ. ರೈತರ ಸಂಪೂರ್ಣ ಸಾಲ ಮನ್ನಾ ಆಗ್ರಹಿಸಿ ಯಡಿಯೂರಪ್ಪ ನೇತೃತ್ವದಲ್ಲಿ ರಾಜ್ಯ ಪ್ರವಾಸ ಕೈಗೊಳ್ಳುವ ಬಗ್ಗೆ ಚರ್ಚಿಸಲಾಗಿದೆ. ಒಟ್ಟಿನಲ್ಲಿ ಲೋಕಸಭಾ ಚುನಾವಣೆಗೆ ರೈತರ ಸಾಲ ಮನ್ನಾವೇ ಬಿಜೆಪಿಗೆ ಅಸ್ತ್ರವಾಗಿದೆ. ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯದ ಕೂಗಿನ ವಿಚಾರದ ಬಗ್ಗೆ, ಹೆಚ್ ಡಿಕೆ ಹೇಳಿಕೆಯ ಬಗ್ಗೆಯೂ ಕೋರ್ ಕಮಿಟಿ ಸಭೆಯಲ್ಲಿ ಚರ್ಚೆ ನಡಸಲಾಗಿದೆ ಎಂದು ಪಬ್ಲಿಕ್ ಟಿವಿಗೆ ಬಿಜೆಪಿ ಮೂಲಗಳಿಂದ ತಿಳಿದುಬಂದಿದೆ.

    ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಇಂದು ಬೆಂಗಳೂರು ಹೊರವಲಯದ ಖಾಸಗಿ ಹೋಟೆಲ್ ನಲ್ಲಿ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ನಡೆದಿದೆ. ಸಭೆಯಲ್ಲಿ ಕೋರ್ ಕಮಿಟಿ ಸದಸ್ಯರಾದ ಅನಂತ್ ಕುಮಾರ್, ಸದಾನಂದ ಗೌಡ, ಜಗದೀಶ್ ಶೆಟ್ಟರ್, ಅರವಿಂದ್ ಲಿಂಬಾವಳಿ, ಸಿ.ಟಿ. ರವಿ, ನಳೀನ್ ಕುಮಾರ್ ಕಟೀಲ್, ಗೋವಿಂದ ಕಾರಜೋಳ, ಪ್ರಹ್ಲಾದ್ ಜೋಷಿ, ಆರ್. ಅಶೋಕ್, ಕೆ.ಎಸ್.ಈಶ್ವರಪ್ಪ, ಉದಾಸಿ, ಬಿ.ಎಲ್.ಸಂತೋಷ್ ಭಾಗಿಯಾಗಿದ್ದಾರೆ.

    ನಳೀನ್ ಕುಮಾರ್ ವಾಪಸ್:
    ಈ ಮೊದಲು ರಾಜ್ಯ ಬಿಜೆಪಿ ಕಚೇರಿಯಲ್ಲೇ ಮೊದಲು ಸಭೆ ನಿಗದಿ ಮಾಡಲಾಗಿತ್ತು. ಆದರೆ ಯಡಿಯೂರಪ್ಪ ಜಿಂದಾಲ್ ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿನ್ನಲೆಯಲ್ಲಿ ಅಲ್ಲೇ ಸಭೆ ಫಿಕ್ಸ್ ಅಂತಾ ನಿನ್ನೆ ಕೋರ್ ಕಮಿಟಿ ಸದಸ್ಯರಿಗೆ ಮಾಹಿತಿ ನೀಡಲಾಗಿತ್ತು. ಬಿಜೆಪಿ ಕೋರ್ ಕಮಿಟಿ ಸಭೆ ಬೆಂಗಳೂರು ಹೊರವಲಯದ ಖಾಸಗಿ ಹೋಟೆಲ್ ಗೆ ಶಿಫ್ಟ್ ಆಗಿತ್ತು. ಹೀಗಾಗಿ ಎಲ್ಲಿಗೆ ತೆರಳಬೇಕು ಎಂಬ ಗೊಂದಲದಲ್ಲಿ ಬಿಜೆಪಿ ಕಚೇರಿಗೆ ಬಂದು ಸಂಸದ ನಳೀನ್ ಕಟೀಲ್ ಅವರು ವಾಪಸ್ ತೆರಳಿದ್ದಾರೆ.