Tag: CS Patil

  • ನಾಳೆಯೂ ಬೆಂಗಳೂರಿನಲ್ಲಿ ಮಹಾಮಳೆ – ಯೆಲ್ಲೋ ಅಲರ್ಟ್ ಘೋಷಣೆ

    ನಾಳೆಯೂ ಬೆಂಗಳೂರಿನಲ್ಲಿ ಮಹಾಮಳೆ – ಯೆಲ್ಲೋ ಅಲರ್ಟ್ ಘೋಷಣೆ

    – ಹಲವು ಜಿಲ್ಲೆಗಳಲ್ಲಿ ನಾಳೆ ಭಾರೀ ಮಳೆ

    ಬೆಂಗಳೂರು: ಇಂದು ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮಳೆಯನ ಅಬ್ಬರ ಜೋರಾಗಿದೆ. ನಗರದ ಹಲವು ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ನಾಳೆಯೂ ಮಳೆ ಮುಂದುವರೆಯುವ ಕಾರಣದಿಂದ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

    ಈ ಸಂಬಂಧ ಮಾಹಿತಿ ನೀಡಿದ ಭಾರತೀಯ ಹವಾಮಾನ ಇಲಾಖೆಯ ಪ್ರಾದೇಶಿಕ ವಿಭಾಗದ ನಿರ್ದೇಶಕ ಸಿ.ಎಸ್. ಪಾಟೀಲ್, ಕರಾವಳಿ ಜಿಲ್ಲೆಗಳಲ್ಲಿ ಅಕ್ಟೋಬರ್ 23ರಿಂದ 25ರವರೆಗೆ ಮಳೆಯಾಗುವ ಸಾಧ್ಯತೆ ಇದೆ. ಜೊತೆಗೆ ಅಕ್ಟೋಬರ್ 26ರಂದು ಕರಾವಳಿಯ ಎಲ್ಲ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.

    ಅಕ್ಟೋಬರ್ 27ರಂದು ರಾಜ್ಯದ ಕೆಲವು ಭಾಗಗಳಲ್ಲಿ ಮಳೆಯಾಗುತ್ತದೆ. ಅಕ್ಟೋಬರ್ 23ರಿಂದ 26ರವರೆಗೆ ದಕ್ಷಿಣ ಕರ್ನಾಟಕದ ಕೆಲವು ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ದಕ್ಷಿಣ ಒಳನಾಡಿನಲ್ಲಿ ಅಕ್ಟೋಬರ್ 24ರಂದು ಬಹುತೇಕ ಎಲ್ಲ ಸ್ಥಳಗಳಲ್ಲಿ ಮಳೆಯಾಗುತ್ತದೆ. ಜೊತೆಗೆ ನಾಳೆಯೂ ಬೆಂಗಳೂರಿನಲ್ಲಿ ಮಳೆ ಮುಂದುವರೆಯಲಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

    ಇಂದು ಬೆಂಗಳೂರು, ರಾಮನಗರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಕೆಲವು ಭಾಗದಲ್ಲಿ ಭಾರೀ ಮಳೆಯಾಗುತ್ತದೆ. ಜೊತೆಗೆ ಅಕ್ಟೋಬರ್ 24ರಂದು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಬ್ಬರ ಮಳೆ ಸಾಧ್ಯತೆಯಿದೆ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಚಿತ್ರದುರ್ಗ, ಬೆಂಗಳೂರು, ರಾಮನಗರ, ಮಂಡ್ಯ, ತುಮಕೂರು, ಕೋಲಾರ, ದಾವಣಗೆರೆ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಸಿ.ಎಸ್. ಪಾಟೀಲ್ ಮಾಹಿತಿ ನೀಡಿದರು.

    ಎಷ್ಟು ಮಳೆಯಾಗುತ್ತೆ?
    64.5 ಮಿ.ಮೀ ನಿಂದ 115.5 ಮಿ.ಮೀ ಒಳಗಡೆ ಮಳೆಯಾಗುವ ಸಾಧ್ಯತೆ ಇದ್ದರೆ ಯೆಲ್ಲೋ ಅಲರ್ಟ್ ಘೋಷಣೆಯಾಗುತ್ತದೆ. 115.6 ಮಿ.ಮೀ ನಿಂದ 204.4 ಮಿ.ಮೀ. ಒಳಗಡೆ ಮಳೆಯಾಗಲಿದ್ದರೆ ಆರೆಂಜ್ ಅಲರ್ಟ್ ಎಂದು ಪ್ರಕಟಿಸಲಾಗುತ್ತದೆ. 204.5 ಮಿ.ಮೀಗಿಂತ ಹೆಚ್ಚು ಮಳೆ ಬೀಳುವ ಸಾಧ್ಯತೆ ಇದ್ದರೆ ರೆಡ್ ಅಲರ್ಟ್ ಘೋಷಣೆ ಮಾಡಲಾಗುತ್ತದೆ.

  • ರಾಜ್ಯದಲ್ಲಿ ಆ.15ರಿಂದ 19ರವರೆಗೆ ಭಾರೀ ಮಳೆ ಸಾಧ್ಯತೆ

    ರಾಜ್ಯದಲ್ಲಿ ಆ.15ರಿಂದ 19ರವರೆಗೆ ಭಾರೀ ಮಳೆ ಸಾಧ್ಯತೆ

    ಬೆಂಗಳೂರು: ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತದ ಹಿನ್ನಲೆಯಲ್ಲಿ ಆಗಸ್ಟ್ 15ರಿಂದ 19ರವರೆಗೆ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆಯ ನಿರ್ದೇಶಕ ಸಿ.ಎಸ್ ಪಾಟೀಲ್ ಅವರು ಪಬ್ಲಿಕ್ ಟಿವಿಗೆ ಮಾಹಿತಿ ನೀಡಿದ್ದಾರೆ.

    ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿದ್ದು ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯ ಮೇಲೂ ಇದು ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ತಮಿಳುನಾಡಿನಲ್ಲಿ ಗಾಳಿ ಬೀಸುತ್ತಿದ್ದು, ಬೆಂಗಳೂರಿನಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಹಾಗೆಯೇ ಮುಂದಿನ ಐದು ದಿನ ಕರಾವಳಿ ಭಾಗದಲ್ಲಿ ಅತಿಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ.

    ಪಶ್ಚಿಮಘಟ್ಟ ಪ್ರದೇಶಗಳಲ್ಲೂ ಭಾರೀ ಮಳೆಯಾಗೋ ಮುನ್ಸೂಚನೆ ದೊರಕಿದೆ. ದಕ್ಷಿಣ ಒಳನಾಡಿನಲ್ಲಿ ಕೂಡ 16ರಿಂದ 18ರವರೆಗೆ ಮಳೆಯಾಗಲಿದೆ. ಬೆಂಗಳೂರು, ಕೋಲಾರ, ಮಂಡ್ಯ, ಮೈಸೂರು ತುಮಕೂರು ಹಾಗೂ ಸುತ್ತ ಮುತ್ತಿನ ಪ್ರದೇಶದಲ್ಲಿ ಸಾಧಾರಣ ಮಳೆ ಆಗಲಿದೆ. ಹಾಗೆಯೇ ಬೆಂಗಳೂರಿನಲ್ಲಿ ಒಮ್ಮೊಮ್ಮೆ ಅತಿ ಹೆಚ್ಚು ಮಳೆಯಾಗೋ ಸಾಧ್ಯತೆ ಕೂಡ ಇದೆ ಎಂದು ಸಿ.ಎಸ್ ಪಾಟೀಲ್ ತಿಳಿಸಿದ್ದಾರೆ.