Tag: former leader

  • ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಅಜಿತ್ ವಾಡೇಕರ್ ನಿಧನ

    ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಅಜಿತ್ ವಾಡೇಕರ್ ನಿಧನ

    ಮುಂಬೈ: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಅಜಿತ್ ವಾಡೇಕರ್(77) ಮುಂಬೈನ ಜಸ್ಲೋಕ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

    ದೀರ್ಘಕಾಲ ಅನಾರೋಗ್ಯದಿಂದ ಬಳಲುತ್ತಿದ್ದ ಅಜಿತ್ ಅವರು ವಿದೇಶಿ ನೆಲದಲ್ಲಿ ಚೊಚ್ಚಲ ಸರಣಿ ಗೆದ್ದಿದ್ದ ಭಾರತೀಯ ತಂಡವನ್ನು ಮುನ್ನಡೆಸಿದ್ದ ಕಪ್ತಾನನೆಂಬ ಹೆಗ್ಗಳಿಕೆಯನ್ನು ಪಡೆದಿದ್ದರು.

    ಟೆಸ್ಟ್ ಆಟಗಾರ, ನಾಯಕ, ತರಬೇತುದಾರ ಮತ್ತು ಆಯ್ಕೆ ಸಮಿತಿ ಅಧ್ಯಕ್ಷರಾಗಿಯೂ ಅಜಿತ್ ವಾಡೇಕರ್ ಕೆಲಸ ಮಾಡಿದ್ದರು. ಇವರು 1971 ರಲ್ಲಿ ಇಂಗ್ಲೆಂಡ್‍ನಲ್ಲಿ ನಡೆದ ಪಂದ್ಯದಲ್ಲಿ ಮೊದಲ ಬಾರಿಗೆ ಜಯಗಳಿಸಿದ್ದ ಭಾರತ ತಂಡದ ನಾಯಕರಾಗಿದ್ದರು.

    ವಾಡೇಕರ್ ಭಾರತವನ್ನು 37 ಟೆಸ್ಟ್ ಮತ್ತು ಎರಡು ಏಕದಿನ ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಪ್ರತಿನಿಧಿಸಿದ್ದರು. 1974ರಲ್ಲಿ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಇವರ ಕೊನೆಯ ಪಂದ್ಯವಾಗಿತ್ತು. ಅಜಿತ್ ಲಕ್ಷ್ಮಣ್ ವಾಡೇಕರ್ ಅವರು 1941 ಏ.1ರಂದು ಜನಿಸಿದ ಇವರು 1966 ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಟೆಸ್ಟ್ ಪಂದ್ಯದ ಮೂಲಕ ವಾಡೇಕರ್ ಅಂತರಾಷ್ಟ್ರೀಯ ಕ್ರಿಕೆಟ್ ಜಗತ್ತಿಗೆ ಪಾದಾರ್ಪಣೆ ಮಾಡಿದ್ದರು. ಇವರು ಆಡಿದ ಒಟ್ಟು ಪಂದ್ಯಗಳಿಂದ 2113 ರನ್ ಕಲೆಹಾಕಿದ್ದರು. ಅಜಿತ್ ವಾಡೇಕರ್ ಅವರಿಗೆ 1972 ರಲ್ಲಿ ಸರ್ಕಾರ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿತ್ತು.

    ಸದ್ಯ ಮಾಜಿ ನಾಯಕನ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಹಾಗೂ ಮತ್ತಿತರ ಗಣ್ಯರು ಸಂತಾಪ ಸೂಚಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv