– ಸೂಕ್ಷ್ಮ-ಸಣ್ಣ ಕೈಗಾರಿಕಾ ವಲಯಕ್ಕೆ ಪ್ರತ್ಯೇಕ ನೀತಿ ರೂಪಿಸುವಂತೆ ಮನವಿ ಸಲ್ಲಿಸಲು ನಿರ್ಧಾರ
– 10 ಲಕ್ಷ ಉದ್ಯಮಿಗಳನ್ನು ರೂಪಿಸುವ ಗುರಿ
ಮಡಿಕೇರಿ: ಉದ್ಯಮ ವಲಯವನ್ನು (Industry sector) ಕಾಡುತ್ತಿರುವ ಸಮಸ್ಯೆಗಳನ್ನ ರಾಜ್ಯ ಸರ್ಕಾರದ ಗಮನಕ್ಕೆ ತರುವ ಕೆಲಸ ಮಾಡಲಾಗುತ್ತಿದೆ. ಇದರಲ್ಲಿ ಮೂಲಸೌಕರ್ಯಗಳ ಕೊರತೆಯೂ ಸೇರಿದೆ ಎಂದು ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾ ಸಂಸ್ಥೆ (FKCCI)ಯ ಅಧ್ಯಕ್ಷೆ ಉಮಾ ರೆಡ್ಡಿ ತಿಳಿಸಿದರು.
ತಮ್ಮ ‘ವಿಷನ್ ಸ್ಟೇಟ್‌ಮೆಂಟ್ 2025–26’ನ್ನು ಇಲ್ಲಿನ ಕ್ಲಬ್ ಮಹೀಂದ್ರ ಹೋಟೆಲ್‌ನಲ್ಲಿ ಶನಿವಾರ ಬಿಡುಗಡೆ ಮಾಡಿದ ಅವರು ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ಎಫ್‌ಕೆಸಿಸಿಐ ಸಂಸ್ಥೆಯು ಉದ್ಯಮಿಗಳು ಮತ್ತು ಸರ್ಕಾರದ ನಡುವೆ ಸಂಪರ್ಕ ಸೇತುವೆಯಾಗಿ ಕೆಲಸ ಮಾಡುತ್ತದೆ. ಇತ್ತೀಚೆಗೆ ರಸ್ತೆಗುಂಡಿ ಸಮಸ್ಯೆಗಳನ್ನ ಪ್ರಸ್ತಾಪಿಸಿದಾಗ ಮುಖ್ಯಮಂತ್ರಿ ಅವರು ಉನ್ನತಮಟ್ಟದ ಸಭೆ ನಡೆಸಿದರು. ಹೀಗೆ, ಅನೇಕ ಸಮಸ್ಯೆಗಳನ್ನ ಗಮನಕ್ಕೆ ತರಲಾಗುತ್ತಿದೆ ಎಂದರು.

ನಾನು ಅಧ್ಯಕ್ಷೆಯಾಗಿ ಅಧಿಕಾರ ವಹಿಸಿಕೊಂಡ ನಂತರ ಇದೇ ಮೊದಲ ಬಾರಿಗೆ ಕೊಡಗು, ಚಿಕ್ಕಮಗಳೂರು, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯನ್ನು ಒಳಗೊಂಡ ವಲಯಕ್ಕೆ ಭೇಟಿ ನೀಡಿದ್ದೇನೆ. ಇಲ್ಲಿನ ಉದ್ಯಮಿಗಳು ಹಾಗೂ ಜನಪ್ರತಿನಿಧಿಗಳೊಂದಿಗೆ ಸಭೆ ನಡೆಸಿ, ಸಮಸ್ಯೆಗಳ ಪರಿಹಾರಕ್ಕೆ ಶ್ರಮಿಸಲಾಗುವುದು ಎಂದು ಭರವಸೆ ನೀಡಿದರು.
10 ಲಕ್ಷ ಉದ್ಯಮಿಗಳನ್ನ ರೂಪಿಸುವ ಗುರಿ
ರಾಜ್ಯದಲ್ಲಿ 10 ಲಕ್ಷ ಉದ್ಯಮಿಗಳನ್ನು ರೂಪಿಸುವ ಗುರಿ ಹೊಂದಲಾಗಿದೆ. ಇದಕ್ಕಾಗಿ ಯುವ ಉದ್ಯಮಿಗಳಿಗೆ ಪ್ರೋತ್ಸಾಹ ಕೊಡಲು ವಿದ್ಯಾರ್ಥಿಗಳಿಂದ ‘ಬಿಸಿನೆಸ್ ಪ್ಲ್ಯಾನ್’ ಅನ್ನು ಆಹ್ವಾನಿಸಿ, ಅದರಲ್ಲಿ ಉತ್ತಮ ಯೋಜನೆಗೆ ಪ್ರೋತ್ಸಾಹ ಧನ ನೀಡುವ ಕಾರ್ಯಕ್ರಮವನ್ನೂ ಮುಂಬರುವ ದಿನಗಳಲ್ಲಿ ಜಾರಿಗೆ ತರಲಾಗುವುದು. ಇದರಿಂದ ಉದ್ಯಮ ವಲಯಕ್ಕೆ ಯುವ ಸಮುದಾಯ ಸೆಳೆಯುವ ಕೆಲಸ ಮಾಡಲಾಗುವುದು ಎಂದು ತಿಳಿಸಿದರು.
ನ.19ರಂದು ಮಹಿಳಾ ಉದ್ಯಮಿಗಳ ದಿನಾಚರಣೆ
ನ.19ರಂದು ಬೆಳಗ್ಗೆ 11 ಗಂಟೆಗೆ ಬೆಂಗಳೂರಿನ ಸರ್‌ಎಂವಿ ಸಭಾಂಗಣದಲ್ಲಿ ಅಂತಾರಾಷ್ಟ್ರೀಯ ಮಹಿಳಾ ಉದ್ಯಮಿಗಳ ದಿನಾಚರಣೆ ಏರ್ಪಡಿಸಲಾಗಿದೆ. ಯಶಸ್ವಿ ಮಹಿಳಾ ಉದ್ಯಮಿಗಳಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ಕಾರ್ಯಕ್ರಮದಲ್ಲಿ ಅನೇಕ ವಿಷಯಗಳಿಗೆ ಸಂಬಂಧಿಸಿದಂತೆ ಚರ್ಚೆ, ಸಂವಾದಗಳು ನಡೆಯಲಿವೆ ಎಂದು ಮಾಹಿತಿ ನೀಡಿದರು.
ರಾಜ್ಯದಲ್ಲಿರುವ ಉದ್ಯಮಿಗಳ ಪೈಕಿ ಶೇ.90ರಷ್ಟು ಸೂಕ್ಷ್ಮ ಮತ್ತು ಸಣ್ಣ ಕೈಗಾರಿಕಾ ವಲಯದವರೇ ಇದ್ದಾರೆ. ಇವರಿಗಾಗಿಯೇ ಪ್ರತ್ಯೇಕ ನೀತಿಯನ್ನು ರೂಪಿಸಬೇಕು ಎಂದು ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಹೇಳಿದರು. ಸಂಸ್ಥೆಯ ಹಿರಿಯ ಉಪಾಧ್ಯಕ್ಷ ಟಿ.ಸಾಯಿರಾಮ್ ಪ್ರಸಾದ್ ಹಾಗೂ ವ್ಯವಸ್ಥಾಪನಾ ಸಮಿತಿ ಸದಸ್ಯ ಗಿರೀಶ್ ಗಣಪತಿ ಭಾಗವಹಿಸಿದ್ದರು.




















