Tag: innauguration

  • ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡಿ ದಸರಾಗೆ ಎಸ್.ಎಲ್ ಭೈರಪ್ಪ ಚಾಲನೆ

    ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡಿ ದಸರಾಗೆ ಎಸ್.ಎಲ್ ಭೈರಪ್ಪ ಚಾಲನೆ

    ಮೈಸೂರು: ಇಂದು ಸಾಹಿತಿ ಎಸ್.ಎಲ್. ಭೈರಪ್ಪ ಅವರು ಚಾಮುಂಡಿ ಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡುವ ಮೂಲಕ ನಾಡಹಬ್ಬ ದಸರಾಗೆ ಅಧಿಕೃತ ಚಾಲನೆ ಕೊಟ್ಟಿದ್ದಾರೆ.

    ಚಾಮುಂಡಿ ಬೆಟ್ಟದಲ್ಲಿ 2019ರ ದಸರಾ ಉತ್ಸವಕ್ಕೆ ಭೈರಪ್ಪ ಅವರು ಚಾಲನೆ ನೀಡಿದ್ದಾರೆ. ಈ ಉದ್ಘಾಟನಾ ಸಮಾರಂಭದಲ್ಲಿ ಸಿಎಂ ಬಿ.ಎಸ್. ಯಡಿಯೂರಪ್ಪ, ಡಿಸಿಎಂ ಗೋವಿಂದ ಕಾರಜೋಳ, ಕೇಂದ್ರ ಸಚಿವ ಸದಾನಂದ ಗೌಡ, ಜೆಡಿಎಸ್ ನಾಯಕ ಜಿ.ಟಿ ದೇವೇಗೌಡ, ಸಚಿವ ವಿ. ಸೋಮಣ್ಣ ಸೇರಿದಂತೆ ರಾಜ್ಯ ಸರ್ಕಾರದ ಸಚಿವರು ಭಾಗಿಯಾಗಿದ್ದು, ಸಾಂಸ್ಕೃತಿಕ ನಾಡಿನಲ್ಲಿ ದಸರಾ ಸಂಭ್ರಮ ಕಳೆಗಟ್ಟಿದೆ.

    ಇಂದಿನಿಂದ ಹತ್ತು ದಿನಗಳ ಕಾಲ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅಕ್ಷರಶಃ ಧಾರ್ಮಿಕ, ಪಾರಂಪರಿಕ, ಸಾಂಸ್ಕೃತಿಕ ಹಾಗೂ ಮನರಂಜನೆ ಪೂರಿತ ವಾತಾವರಣ ನಿರ್ಮಾಣವಾಗಲಿದೆ. ವಿಶ್ವವನ್ನೇ ತನ್ನತ್ತ ಸೆಳೆದುಕೊಂಡು ತನ್ನ ವೈವಿಧ್ಯಮಯವಾದ ಆಚರಣೆಗಳನ್ನು ಜಗತ್ತಿಗೆ ತೋರ್ಪಡಿಸುವ ಆಚರಣೆ ಅಂದರೆ ಅದೇ ಮೈಸೂರು ದಸರಾ ಮಹೋತ್ಸವ.

    ಅರಮನೆಯಲ್ಲಿ ರಾಜಪರಂಪರೆಯ ನವರಾತ್ರಿ ಉತ್ಸವಕ್ಕೂ ಇವತ್ತು ಚಾಲನೆ ಸಿಗಲಿದೆ. ಬೆಳಗ್ಗೆ 5:10 ರಿಂದ 5:30ರ ನಡುವೆ ರತ್ನಖಚಿತ ಆಸನಕ್ಕೆ ಸಿಂಹ ಜೋಡಣೆ ಮಾಡಲಾತ್ತದೆ. ಬೆಳಗ್ಗೆ 8:05 ರಿಂದ 8:55ರ ನಡುವೆ ಅರಮನೆ ಒಳ ಆವರಣದ ಚಾಮುಂಡಿ ತೊಟ್ಟಿಯಲ್ಲಿ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‍ಗೆ ಕಂಕಣಧಾರಣೆ ಮಾಡಲಾಗುತ್ತದೆ. ಬೆಳಗ್ಗೆ 9:30ಕ್ಕೆ ಅರಮನೆಯ ಸವಾರಿ ತೊಟ್ಟಿಗೆ ಪಟ್ಟದ ಆನೆ, ಪಟ್ಟದ ಕುದುರೆ, ಪಟ್ಟದ ಹಸು ಆಗಮಿಸಲಿದ್ದು, ಬೆಳಗ್ಗೆ 9:50 ರಿಂದ 10:35 ಕಳಸ ಪೂಜೆ ನೆರವೆರಿಸಲಾಗುತ್ತದೆ. ನಂತರ ಸಿಂಹಾಸನರೋಹಣ ಮಾಡುವ ಮೂಲಕ ಖಾಸಗಿ ದರ್ಬಾರ್ ನಡೆಯಲಿದೆ. ಬಳಿಕ ಚಾಮುಂಡಿ ತೊಟ್ಟಿಯಿಂದ ಕನ್ನಡಿ ತೊಟ್ಟಿಗೆ ಚಾಮುಂಡೇಶ್ವರಿ ತರಲಾಗುವುದು. ಈ ಮೂಲಕ ಮೊದಲ ದಿನದ ಅರಮನೆ ಕಾರ್ಯಕ್ರಮ ಮುಕ್ತಾಯವಾಗುತ್ತದೆ.

    ಇಂದಿನಿಂದ 10 ದಿನಗಳ ಕಾಲ ಮೈಸೂರು ವಿದ್ಯುತ್ ಅಲಂಕಾರದಿಂದ ಕಂಗೊಳಿಸುತ್ತಿರುತ್ತದೆ. ಅರಮನೆ ಸೇರಿದಂತೆ ಐತಿಹಾಸಿಕ ಕಟ್ಟಡಗಳು, ಸರ್ಕಾರಿ ಕಟ್ಟಡಗಳು ಹಾಗೂ ಮೈಸೂರಿನ ಬಹುಪಾಲು ರಸ್ತೆಗಳು ವಿದ್ಯುತ್ ದೀಪಗಳಿಂದ ಜಗಮಗಿಸುತ್ತಿರುತ್ತವೆ. ಜೊತೆಗೆ ಕುಸ್ತಿ, ಆಹಾರ ಮೇಳ, ಫಲಪುಷ್ಪ ಪ್ರದರ್ಶನ, ಸಾಹಸ ಕ್ರೀಡೆಗಳು, ಚಲನಚಿತ್ರೋತ್ಸವ, ವಸ್ತು ಪ್ರದರ್ಶನ, ಪುಸ್ತಕ ಮೇಳ, ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿದ್ದು, ದಸರಾಗೆ ಮತ್ತಷ್ಟು ರಂಗು ತುಂಬಲಿವೆ.

  • ಬಡವರ ಹಸಿವು ನೀಗಿಸುವ ಇಂದಿರಾ ಕ್ಯಾಂಟೀನ್ ರಾಜಕಾರಣಿಗಳ ಜಟಾಪಟಿಗೆ ಬಲಿ!

    ಬಡವರ ಹಸಿವು ನೀಗಿಸುವ ಇಂದಿರಾ ಕ್ಯಾಂಟೀನ್ ರಾಜಕಾರಣಿಗಳ ಜಟಾಪಟಿಗೆ ಬಲಿ!

    ಬೆಂಗಳೂರು: ನಗರದ ಹೊರವಲಯ ನೆಲಮಂಗಲ ಪಟ್ಟಣದ ಬಿಎಚ್ ರಸ್ತೆಯಲ್ಲಿ ನಿರ್ಮಾಣವಾಗಿರುವ ಇಂದಿರಾ ಕ್ಯಾಂಟೀನ್ ಉದ್ಘಾಟನೆ ಮಾಡಲು ಮೈತ್ರಿ ಸರ್ಕಾರದ ಶಾಸಕ ಹಾಗೂ ಸಚಿವರ ನಡುವೆ ಮುಸುಕಿನ ಗುದ್ದಾಟ ಶುರುವಾಗಿದೆ.

    ರಾಜ್ಯದಲ್ಲಿ ಸಿದ್ದರಾಮಯ್ಯ ಸಿಎಂ ಆಗಿದ್ದ ವೇಳೆ ಬೆಂಗಳೂರು ನಗರ ಸೇರಿದಂತೆ ರಾಜ್ಯದ ವಿವಿಧ ತಾಲೂಕಿನಲ್ಲಿ, ಬಡವರ ಹಸಿವು ನೀಗಿಸಲು ಇಂದಿರಾ ಕ್ಯಾಂಟೀನ್ ಪ್ರಾರಂಭಿಸುವ ಯೋಜನೆ ತಂದು ಜನರಿಗೆ ಆಸರೆಯಾಗಿದ್ದರು. ಆದ್ರೆ ನಂತರ ಬಂದ ಮೈತ್ರಿ ಸರ್ಕಾರದಲ್ಲಿ ಜೆಡಿಎಸ್ ಶಾಸಕ ಹಾಗೂ ಕಾಂಗ್ರೆಸ್ ಜಿಲ್ಲಾ ಉಸ್ತುವಾರಿ ಸಚಿವರ ಮುಸುಕಿನ ಗುದ್ದಾಟದಿಂದ ಈ ಕ್ಯಾಂಟೀನ್ ಉದ್ಘಾಟನೆಯಾಗದೇ ಜನರ ಆಕ್ರೋಶಕ್ಕೆ ಕಾರಣವಾಗಿದೆ.

    ಕಳೆದ ಒಂದು ವರ್ಷದ ಹಿಂದೆ ನೆಲಮಂಗಲದಲ್ಲಿ ಇಂದಿರಾ ಕ್ಯಾಂಟೀನ್ ಕಾಮಗಾರಿ ಪ್ರಾರಂಭವಾಗಿತ್ತು. ಚುನಾವಣೆ ಪ್ರಾರಂಭದಲ್ಲಿ ಬಿರುಸಿನಿಂದ ಪ್ರಾರಂಭವಾಗಿದ್ದ ಕಾಮಗಾರಿ, ಚುನಾವಣೆ ನಂತರ ಕುಂಟುತ್ತಾ ಸಾಗಿತ್ತು. ಆಮೆಗತಿಯಲ್ಲಿ ನಡೆಯುತ್ತಿದ್ದ ಕಾಮಗಾರಿ 8 ತಿಂಗಳ ನಂತರ ಸಂಪೂರ್ಣವಾಗಿ ಪೂರ್ಣವಾಗಿದೆ. ಅಕ್ಟೋಬರ್ 22ಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕಾಂಗ್ರೆಸ್‍ನ ಕೃಷ್ಣಬೈರೇಗೌಡ ಹಾಗೂ ನೆಲಮಂಗಲ ಜೆಡಿಎಸ್ ಶಾಸಕ ಶ್ರೀನಿವಾಸ್‍ಮೂರ್ತಿ ನೇತೃತ್ವದಲ್ಲಿ ಈ ಇಂದಿರಾ ಕ್ಯಾಂಟೀನ್ ಗೆ ಚಾಲನೆ ಸಿಗಬೇಕಿತ್ತು. ಆದ್ರೆ ರಾಜಕಾರಣಿಗಳ ಒಳ ಜಗಳಕ್ಕೆ ಇಂದಿರಾ ಕ್ಯಾಂಟೀನಿಗೆ ಇನ್ನೂ ಉದ್ಘಾಟನೆಯಾಗಿ ಭಾಗ್ಯ ಸಿಕ್ಕಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.

    ಬಡವರ ಹಸಿವು ನೀಗಿಸುವ ಇಂದಿರಾ ಕ್ಯಾಂಟೀನ್ ಈಗ ರಾಜಕಾರಣಿಗಳ ಜಟಾಪಟಿಗೆ ಬಲಿಯಾಗಿದೆ. ಒಟ್ಟಾರೆ ಅಧಿಕಾರಿಗಳ ಮಾತು ಹಾಗೂ ಶಾಸಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ನಿರ್ಲಕ್ಷ್ಯದಿಂದಾಗಿ, ನೆಲಮಂಗಲದ ಇಂದಿರಾ ಕ್ಯಾಂಟೀನ್ ಪ್ರಾರಂಭದ ನಿರೀಕ್ಷೆ ಮರೆಯುವಂತಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews