Tag: MLA Satyanarayan

  • ಖಾಲಿ ಸ್ಥಾನಕ್ಕೆ ಜೋತುಬೀಳುವ ಜಾಯಮಾನ ನನ್ನದಲ್ಲ: ನಿಖಿಲ್ ಕುಮಾರಸ್ವಾಮಿ

    ಖಾಲಿ ಸ್ಥಾನಕ್ಕೆ ಜೋತುಬೀಳುವ ಜಾಯಮಾನ ನನ್ನದಲ್ಲ: ನಿಖಿಲ್ ಕುಮಾರಸ್ವಾಮಿ

    ಬೆಂಗಳೂರು: ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಜೆಡಿಎಸ್ ನಿಂದ ಮಾಜಿ ಸಿಎಂ ಪುತ್ರ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಮಾಡ್ತಾರಾ ಅನ್ನೋ ಚರ್ಚೆ ಕೆಲ ದಿನಗಳಿಂದ ಆರಂಭಗೊಂಡಿತ್ತು. ಈ ಎಲ್ಲ ಊಹಾಪೋಹಗಳಿಗೆ ಸ್ವತಃ ನಿಖಿಲ್ ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ.

    ಪತ್ರಿಕಾ ಪ್ರಕಟನೆ: ಇಂತಹ ಕಪೋಲಕಲ್ಪಿತ ಸುದ್ದಿ- ವದಂತಿಗಳನ್ನು ಯಾರು ಹಬ್ಬಿಸುತ್ತಾರೋ? ಯಾಕೆ ಹಬ್ಬಿಸುತ್ತಾರೋ? ಇದರಿಂದ ಕುತ್ಸಿತ ಮನಸುಗಳಿಗೆ ಆಗುವ ಲಾಭ ಏನೆಂಬುದು ನನಗೆ ತಿಳಿಯದಾಗಿದೆ. ತುಮಕೂರು ಜಿಲ್ಲೆಯ ಶಿರಾ ವಿಧಾನಸಭಾ ಕ್ಷೇತ್ರದ ಚುನಾವಣೆ ಮೇಲೆ ಕಣ್ಣಿಟ್ಟಿದ್ದೇನೆ ಎಂಬಂತೆ ವದಂತಿಗಳನ್ನು ಪುಂಖಾನುಪುಂಖವಾಗಿ ಹರಿಯ ಬಿಡಲಾಗುತ್ತಿದೆ.

    ಮಾಜಿ ಸಚಿವರು ಹಾಗೂ ಶಾಸಕರಾಗಿದ್ದ ಬಿ. ಸತ್ಯನಾರಾಯಣ ಅವರು ಅಕಾಲಿಕ ನಿಧನರಾಗಿದ್ದರಿಂದ ಶಿರಾ ಕ್ಷೇತ್ರಕ್ಕೆ ಉಪಚುನಾವಣೆ ಅನಿವಾರ್ಯವಾಗಿದೆ. ಹಾಗಂತ ಅಕಾಲಿಕವಾಗಿ ಖಾಲಿಬಿದ್ದ ಕ್ಷೇತ್ರಕ್ಕೆ ಜೋತುಬೀಳುವ ಜಾಯಮಾನ ನನ್ನದಲ್ಲವೇ ಅಲ್ಲ. 2018 ರ ವಿಧಾನಸಭಾ ಚುನಾವಣೆ ವೇಳೆ ಮೂರು ದಿನಗಳ ಕಾಲ ಶಿರಾ ಸೇರಿದಂತೆ ತುಮಕೂರು ಜಿಲ್ಲೆಯಲ್ಲಿ ಪಕ್ಷದ ಪರವಾಗಿ ನಿಷ್ಠಾವಂತ ಕಾರ್ಯಕರ್ತನಾಗಿ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದು ನಿಜ.

    ಇನ್ನು ಸತ್ಯ ನಾರಾಯಣ ಅವರ ಪಕ್ಷ ನಿಷ್ಠೆ ಮತ್ತು ಬದ್ಧತೆ ಪ್ರಶ್ನಾತೀತ. ಯಾವುದೇ ಆಮಿಷಗಳಿಗೆ ಬಲಿಯಾಗದೆ ಕೊನೆ ಉಸಿರಿರುವವರೆಗೂ ನಂಬಿದ ಪಕ್ಷವನ್ನು ಹೆಸರಿಗೆ ತಕ್ಕಂತೆ ‘ಸತ್ಯ”ವಾಗಿಸಿ ಕೊಂಡಿದ್ದರು. ಉಪಚುನಾವಣೆಗೆ ಯೋಗ್ಯ, ಸಮರ್ಥ ಅಭ್ಯರ್ಥಿಯನ್ನು ಪಕ್ಷದ ವರಿಷ್ಠರು ಆಯ್ಕೆ ಮಾಡಲಿದ್ದಾರೆ. ಅವರ ಪರವಾಗಿಯೂ ಪಕ್ಷದ ಅಭ್ಯರ್ಥಿ ಪರ ಟೊಂಕಕಟ್ಟಿ ನಿಂತು ಪ್ರಚಾರ ಮಾಡಲಿದ್ದೇನೆ. ಇದರಲ್ಲಿ ಯಾರಿಗೂ ಎಳ್ಳಷ್ಟು ಸಂಶಯ ಬೇಡ. ನಾನು ಶಿರಾ ಉಪಚುನಾವಣೆಯ ಅಭ್ಯರ್ಥಿಯಾಗುವ ಕನಸು ಕಂಡವನಲ್ಲ. ಯಾವುದೇ ಕಾರಣಕ್ಕೂ ನಾನು ಶಿರಾದಲ್ಲಿ ಅಭ್ಯರ್ಥಿ ಆಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

    ಸತ್ಯನಾರಾಯಣ ಅವರ ‘ಚಿತೆ” ಆರುವ ಮುನ್ನವೇ ಉಪಚುನಾವಣೆ ಅಖಾಡಕ್ಕೆ ನನ್ನ ಹೆಸರನ್ನು ತೇಲಿ ಬಿಟ್ಟವರ ಬಗ್ಗೆ ಮರುಕವಿದೆ. ಇಂತಹ ಹೀನ ಸಂಸ್ಕೃತಿಯ ರಾಜಕೀಯ ಪರಂಪರೆ ನಮ್ಮದಲ್ಲ. ಶಿರಾ ಉಪಚುನಾವಣೆಗೆ ನನ್ನನ್ನು ಕಣಕ್ಕಿಳಿಸಲು ಒತ್ತಡಗಳಿವೆ ಎಂಬಂತೆ ಹಾಗೂ ರಾಜಕೀಯ ನೆಲೆ ಕಂಡುಕೊಳ್ಳಲು ಈ ಕ್ಷೇತ್ರವನ್ನೇ ‘ಚಿಮ್ಮು ಹಲಗೆ” ಮಾಡಿ ಕೊಳ್ಳುವ ಹವಣಿಕೆಯಲ್ಲಿದ್ದಾರೆ ಎಂಬ ವದಂತಿಗಳನ್ನು ಸಾರಾಸಗಟಾಗಿ ತಳ್ಳಿ ಹಾಕುತ್ತೇನೆ.

    ರಾಜ್ಯ ಜಾತ್ಯಾತೀತ ಯುವ ಜನತಾದಳದ ಅಧ್ಯಕ್ಷನಾಗಿರುವ ನಾನು ಪಕ್ಷಕ್ಕಾಗಿ ದುಡಿಯುವಾಗ ‘ಹುದ್ದೆ”ಯ ಕಿರೀಟವನ್ನು ಬದಿಗಿರಿಸಿ ಪಕ್ಷದ ಸಾಮಾನ್ಯ ಕಾರ್ಯಕರ್ತನಂತೆ ದಣಿವರಿಯದೆ ದುಡಿಯುತ್ತೇನೆ. ಪಕ್ಷದ ನಿಷ್ಠಾವಂತ ಹಿರಿಯ-ಕಿರಿಯರ ನಿಸ್ವಾರ್ಥ ರಾಜಕೀಯ ನಿಷ್ಠೆಯೇ ಇದಕ್ಕೆ ಮೂಲ ಪ್ರೇರಣೆ ಎಂದು ಮಾದಾರಾ ದೂಳಯ್ಯನವರ ಕೆಲ ಸಾಲುಗಳನ್ನು ನಿಖಿಲ್ ಕುಮಾರಸ್ವಾಮಿ ಬರೆದುಕೊಂಡಿದ್ದಾರೆ.

    ಅರಿವುಂಟೆ? ತೊಳಗಿ ಬೆಳಗಿ ಪ್ರಜ್ವಲಿಸಿ ಉರಿವ ಬೆಳಗು
    ಕೆಡುವಲ್ಲಿ ಉಡುಗುತ್ತಿದ್ದೇನೆ ಎಂದು ನುಡಿಯಿತ್ತೆ?
    ಇಂತಿವ ಹಿಡಿವಲ್ಲಿ ಬಿಡುವಲ್ಲಿ ಮಿಕ್ಕಾದವ
    ಒಡಗೂಡುವಲ್ಲಿ ಅಡಿಯೇರಿ ಮತ್ತೆ ಪುನರಪಿ ಅಡಿ ಉಂಟೆ?
    ತೊಟ್ಟು ಬಿಟ್ಟ ಹಣ್ಣಿಂಗೆ ಮತ್ತಾ ಬುಡದಾಸೆಯೇಕೆ? ನಿಶ್ಚಯವೆಂಬುದು ನಷ್ಟವಾದಲ್ಲಿ ಕಾಮಧೂಮ ಧೂಳೇಶ್ವರನೆಂಬ ಲಕ್ಷವೇತಕ್ಕೆ?
    – ಮಾದಾರ ಧೂಳಯ್ಯ

  • ದೇವೇಗೌಡ್ರು ಕುಟುಂಬ ರಾಜಕಾರಣ ಮಾಡೋದ್ರಲ್ಲಿ ತಪ್ಪೇನಿದೆ: ಶಾಸಕ ಸತ್ಯನಾರಾಯಣ

    ದೇವೇಗೌಡ್ರು ಕುಟುಂಬ ರಾಜಕಾರಣ ಮಾಡೋದ್ರಲ್ಲಿ ತಪ್ಪೇನಿದೆ: ಶಾಸಕ ಸತ್ಯನಾರಾಯಣ

    ತುಮಕೂರು: ಕಾಂಗ್ರೆಸ್ ಹಾಗೂ ಬಿಜೆಪಿಯಲ್ಲೂ ಕುಟುಂಬ ರಾಜಕಾರಣ ಇದೆ. ಹೀಗಾಗಿ ದೇವೇಗೌಡರು ಕುಟುಂಬ ರಾಜಕಾರಣ ಮಾಡುವುದರಲ್ಲಿ ತಪ್ಪೇನಿದೆ ಎಂದು ಜೆಡಿಎಸ್ ಶಾಸಕ ಸತ್ಯನಾರಾಯಣ ಪ್ರಶ್ನಿಸಿದ್ದಾರೆ.

    ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ದೇವೇಗೌಡರು ಕುಟುಂಬ ರಾಜಕಾರಣ ಮಾಡ್ತಿದೆ ಎಂಬ ವಿಚಾರವಾಗಿ ಪ್ರತಿಕ್ರಿಯಿಸಿದರು. ಯಾಕೆ ಕಾಂಗ್ರೆಸ್ಸಿನಲ್ಲಿ ನೆಹರು ಕುಟಂಬ ರಾಜಕಾರಣ ಮಾಡಿಲ್ವಾ? ರಾಜೀವ್, ಇಂದಿರಾ, ಸೋನಿಯಾ, ಈಗ ಅಣ್ಣ ತಂಗಿ ಬಂದಿಲ್ವಾ? ಹಾಗೆಯೇ ಬಿಜೆಪಿಯಲ್ಲಿ ಯಡಿಯೂರಪ್ಪ ಮತ್ತು ಅವರ ಮಕ್ಕಳು ರಾಜಕಾರಣ ಮಾಡುತ್ತಿಲ್ವಾ? ದೇವೇಗೌಡರ ಫ್ಯಾಮಿಲಿ ಕುಟುಂಬ ರಾಜಕಾರಣ ಮಾಡುವುದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿ ಕಿಡಿಕಾರಿದರು.

    ಕೇವಲ ಸಂಸದ ಮುದ್ದಹನುಮೇಗೌಡ, ಶಾಸಕ ರಾಜಣ್ಣ ಮಾತ್ರ ಅಲ್ಲ. ಅವರ ಜೊತೆ ಇನ್ನಿಬ್ಬರು ಹೋದರೂ ಏನೂ ಆಗಲ್ಲ. ದೇವೇಗೌಡರ ಗೆಲುವನ್ನು ತಡೆಯಲು ಅವರಿಂದ ಸಾಧ್ಯವಿಲ್ಲ. ಮತದಾರ ಪ್ರಭುವಿನದ್ದೇ ಅಂತಿಮ ತೀರ್ಮಾನ. ಲೀಡರ್‍ಗಳ ಜೊತೆ ಜೈಕಾರ ಹಾಕೋರು, ಬಹುಫರಾಕ್ ಹೇಳೋರು, ಹೊಡೆದಾಡೋರು, ತಲೆ ಒಡೆಯೋರು ನಿಜವಾದ ಮತದಾರರಲ್ಲ. ಮನೆಯಲ್ಲಿ ಕುಂತವರೇ ನಿಜವಾದ ಮತದಾರರು ಎಂದು ಹೇಳಿದರು.

  • ದೇವಿಯ ಬಲಿಗಾಗಿ ಬಿಟ್ಟ ಕೋಣದಿಂದ ವ್ಯಕ್ತಿ ಬಲಿ!

    ದೇವಿಯ ಬಲಿಗಾಗಿ ಬಿಟ್ಟ ಕೋಣದಿಂದ ವ್ಯಕ್ತಿ ಬಲಿ!

    ತುಮಕೂರು: ಕೋಣ ತಿವಿತದಿಂದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ತುಮಕೂರು ಜಿಲ್ಲೆ ಶಿರಾ ತಾಲೂಕಿನ ಹೊನ್ನೇಹಳ್ಳಿಯಲ್ಲಿ ನಡೆದಿದೆ.

    ದಾಸಮಾರಪ್ಪ(65) ಮೃತ ದುರ್ದೈವಿ. ದಾಳಿ ನಡೆಸಿದ ಕೋಣವನ್ನು ಕೆಲವು ವರ್ಷಗಳ ಹಿಂದೆ ಮಾರಮ್ಮ ದೇವಿ ಬಲಿಗಾಗಿ ಬಿಡಲಾಗಿತ್ತು. ದಾಸಮಾರಪ್ಪ ಹೊಲದಲ್ಲಿ ಕೆಲಸ ಮಾಡುವ ವೇಳೆ ಏಕಾಏಕಿ ಕೋಣ ದಾಳಿ ಮಾಡಿದ್ದು, ಬಲವಾಗಿ ತಿವಿದಿದ್ದರಿಂದ ದಾಸಮಾರಪ್ಪ ಮೃತಪಟ್ಟಿದ್ದಾರೆ.

    ಘಟನಾ ಸ್ಥಳಕ್ಕೆ ಶಾಸಕ ಸತ್ಯನಾರಾಯಣ್ ಭೇಟಿ ನೀಡಿ, ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ಕೋಣನ ಹಾವಳಿ ಹಾಗೂ ಆರ್ಭಟಕ್ಕೆ ಹೊನ್ನೇನಹಳ್ಳಿ ಗ್ರಾಮಸ್ಥರು ತತ್ತರಿಸಿದ್ದು, ಅದನ್ನು ಹಿಡಿಯಲು ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಅಧಿಕಾರಿಗಳು ಸ್ಥಳಕ್ಕೆ ಈಗ ದೌಡಾಯಿಸಿದ್ದಾರೆ.