Tag: NEET re exam

  • ನೀಟ್ ಮರು ಪರೀಕ್ಷೆಗೆ ಡೇಟ್ ಫಿಕ್ಸ್

    ನೀಟ್ ಮರು ಪರೀಕ್ಷೆಗೆ ಡೇಟ್ ಫಿಕ್ಸ್

    ಬೆಂಗಳೂರು: ನೀಟ್ ಮರು ಪರೀಕ್ಷೆಗೆ ಕೇಂದ್ರ ಮಾನವ ಸಂಪನ್ಮೂಲ ಇಲಾಖೆ ದಿನಾಂಕ ನಿಗದಿ ಮಾಡಿದೆ.

    ಕರ್ನಾಟಕ, ಪಶ್ಚಿಮ ಬಂಗಾಳ ಹಾಗೂ ಒರಿಸ್ಸಾದಲ್ಲಿ ಮೇ 20ರಂದು ನೀಟ್ ಮರು ಪರೀಕ್ಷೆ ನಡೆಯಲಿದೆ. ರೈಲು ವಿಳಂಬದಿಂದ ನೀಟ್ ಪರೀಕ್ಷೆ ವಂಚಿತರಾಗಿದ್ದ ಕರ್ನಾಟಕದ 500ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಅವಕಾಶ ಸಿಕ್ಕಂತಾಗಿದೆ.

    ರಾಜ್ಯ ಸೇರಿದಂತೆ ದೇಶದ ವಿವಿಧ ಕಡೆಗಳಲ್ಲಿ ನೀಟ್ ಪರೀಕ್ಷೆಯು ಭಾನುವಾರ ನಡೆಯಿತು. ಬಳ್ಳಾರಿಯಿಂದ ಬೆಂಗಳೂರಿಗೆ ಪರೀಕ್ಷೆಗೆ ಬರಬೇಕಾಗಿದ್ದ ಕೆಲ ವಿದ್ಯಾರ್ಥಿಗಳು ನಗರಕ್ಕೆ ಆಗಮಿಸಲು ಹಂಪಿ ಎಕ್ಸ್ ಪ್ರೆಸ್ ರೈಲಿನಲ್ಲಿ ಪ್ರಯಾಣ ಬೆಳೆಸಿದ್ದರು. ಆದರೆ ಭಾನುವಾರ ಬೆಳಗ್ಗೆ 6 ಗಂಟೆಗೆ ನಗರಕ್ಕೆ ಆಗಮಿಸಿದ ಬೇಕಿದ್ದ ರೈಲು 8 ಗಂಟೆ ತಡವಾಗಿ ಆಗಮಿಸಿತ್ತು. ಇದರಿಂದ ವಿದ್ಯಾರ್ಥಿಗಳು ಪರೀಕ್ಷೆಯಿಂದ ವಂಚಿತರಾಗಿದ್ದರು.

    ಈ ಸಂಬಂಧ ಸಿಎಂ ಕುಮಾರಸ್ವಾಮಿ ಅವರು, ಹಂಪಿ ಎಕ್ಸ್‍ಪ್ರೆಸ್ ರೈಲು ವಿಳಂಬದಿಂದಾಗಿ 500ಕ್ಕೂ ಹೆಚ್ಚು ವಿದ್ಯಾರ್ಥಿಗಳು ನೀಟ್ ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗಿಲ್ಲ. ಹೀಗಾಗಿ ಆ ವಿದ್ಯಾರ್ಥಿಗಳಿಗೆ ಮರು ಪರೀಕ್ಷೆ ನಡೆಸಿ ಎಂದು ಕೇಂದ್ರ ಮಾನವ ಸಂಪನ್ಮೂಲ ಇಲಾಖೆಗೆ ಮನವಿ ಮಾಡಿಕೊಂಡಿದ್ದರು.

    ಸಿಎಂ ಕುಮಾರಸ್ವಾಮಿಯವರ ಮನವಿಗೆ ಸೋಮವಾರ ಟ್ವೀಟ್ ಮೂಲಕ ಪ್ರತಿಕ್ರಿಯೆ ನೀಡಿದ ಕೇಂದ್ರ ಸಚಿವ ಪ್ರಕಾಶ್ ಜಾವ್ಡೇಕರ್ ಅವರು, ರೈಲು ವಿಳಂಬದಿಂದ ನೀಟ್ ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗದ ವಿದ್ಯಾರ್ಥಿಗಳಿಗೆ ಮರು ಪರೀಕ್ಷೆ ನಡೆಸಲು ಅವಕಾಶ ನೀಡಲಾಗುತ್ತದೆ ಎಂದು ತಿಳಿಸಿದ್ದರು.

    ಕೇಂದ್ರ ಸಚಿವರು ಮರು ಪರೀಕ್ಷೆಗೆ ಅವಕಾಶ ಕಲ್ಪಿಸುತ್ತಿದ್ದಂತೆ ಸಿಎಂ ಟ್ವೀಟ್ ಮೂಲಕ ಧನ್ಯವಾದ ತಿಳಿಸಿದ್ದರು. ಇತ್ತ ಫೋನಿ ಚಂಡಮಾರುತದ ಪರಿಣಾಮ ಪಶ್ಚಿಮ ಬಂಗಾಳ ಹಾಗೂ ಒಡಿಶಾ ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಿದ್ದರು. ಹೀಗಾಗಿ ಅವರಿಗೂ ಮೇ 20ರಂದು ಮರು ಪರೀಕ್ಷೆ ನಡೆಸಲು ಕೇಂದ್ರ ಸಚಿವಾಲಯ ನಿರ್ಧರಿಸಿದೆ.