Tag: Postal exams

  • ಅಂಚೆ ಇಲಾಖೆಯ ಎಕ್ಸಾಮ್: ಕನ್ನಡ ಸೇರಿದಂತೆ ಪ್ರಾದೇಶಿಕ ಭಾಷೆಯಲ್ಲಿ ಮರು ಪರೀಕ್ಷೆ

    ಅಂಚೆ ಇಲಾಖೆಯ ಎಕ್ಸಾಮ್: ಕನ್ನಡ ಸೇರಿದಂತೆ ಪ್ರಾದೇಶಿಕ ಭಾಷೆಯಲ್ಲಿ ಮರು ಪರೀಕ್ಷೆ

    ನವದೆಹಲಿ: ಕೇಂದ್ರ ಸರ್ಕಾರದ ಅಂಚೆ ಇಲಾಖೆಯ ವಿವಿಧ ಹುದ್ದೆಗಳಿಗೆ ಜುಲೈ 14ರಂದು ನಡೆದ ಪರೀಕ್ಷೆಯನ್ನು ರದ್ದುಗೊಳಿಸಲಾಗಿದ್ದು, ಕನ್ನಡ ಸೇರಿದಂತೆ ಪ್ರಾದೇಶಿಕ ಭಾಷೆಗಳಲ್ಲಿ ಮರು ಪರೀಕ್ಷೆ ನಡೆಸಲು ಸರ್ಕಾರ ಒಪ್ಪಿಗೆ ಸೂಚಿಸಿದೆ.

    ಜುಲೈ 14ರಂದು ಅಂಚೆ ಇಲಾಖೆ ಸೇರಿದಂತೆ ಕೇಂದ್ರ ಸರ್ಕಾರದ ವಿವಿಧ ಹುದ್ದೆಗಳಿಗೆ ಪರೀಕ್ಷೆ ನಡೆಸಲಾಗಿತ್ತು. ದೇಶದ ವಿವಿಧ ರಾಜ್ಯದ ಸುಮಾರು 10 ಲಕ್ಷಕ್ಕೂ ಅಧಿಕ ಜನರು ಪರೀಕ್ಷೆ ಬರೆದಿದ್ದರು. ಆದರೆ ಕಳೆದ ವರ್ಷ ಇದೇ ಪರೀಕ್ಷೆಯನ್ನು ಕನ್ನಡ, ತಮಿಳು, ತೆಲುಗು ಸೇರಿದಂತೆ 15 ಪ್ರಾದೇಶಿಕ ಭಾಷೆಗಳಲ್ಲಿ ನಡೆಸಲಾಗಿತ್ತು. ಆದರೆ ಈ ವರ್ಷ ಇಂಗ್ಲೀಷ್ ಹಾಗೂ ಹಿಂದಿ ಭಾಷೆಯಲ್ಲಿ ಮಾತ್ರ ಪರೀಕ್ಷೆಯನ್ನು ನಡೆಸಲಾಗಿದೆ. ಅಷ್ಟೇ ಅಲ್ಲದೆ ಪರೀಕ್ಷೆಗೆ ಮೂರು ದಿನಗಳು ಬಾಕಿ ಇರುವಾಗ ಅಂದರೆ ಜುಲೈ 11ರಂದು ಈ ಕುರಿತು ಸುತ್ತೋಲೆ ಹೊರಡಿಸಲಾಗಿತ್ತು.

    ಕೇಂದ್ರ ಸರ್ಕಾರದ ಈ ನಿರ್ಧಾರದಿಂದಾಗಿ ಹುದ್ದೆಗೆ ಅರ್ಜಿ ಸಲ್ಲಿಸಿದ್ದ ದಕ್ಷಿಣ ಭಾರತದ ವಿದ್ಯಾರ್ಥಿಗಳಿಗೆ ಆಘಾತ ಉಂಟಾಗಿತ್ತು. ಈ ದಿಢೀರ್ ನಿರ್ಧಾರಕ್ಕೆ ವ್ಯಾಪಕ ಟೀಕೆ ವ್ಯಕ್ತವಾಗಿತ್ತು. ಹೀಗಾಗಿ ಮಂಗಳವಾರದ ಲೋಕಸಭೆ ಅಧಿವೇಶನದಲ್ಲಿ ಪ್ರತಿಪಕ್ಷಗಳು ಆಡಳಿತ ಪಕ್ಷದ ವಿರುದ್ಧ ಗುಡುಗಿ, ಮರು ಪರೀಕ್ಷೆ ನಡೆಸಬೇಕು ಒತ್ತಾಯಿದರು.

    ಈ ಕುರಿತು ಧ್ವನಿ ಎತ್ತಿದ ತಮಿಳುನಾಡಿನ ಡಿಎಂಕೆ ಪಕ್ಷದ ಸಂಸದರು, ಪರೀಕ್ಷೆಗೆ ಕೇವಲ 3 ದಿನ ಬಾಕಿ ಇರುವಾಗ ಇಂತಹ ನಿರ್ಧಾರ ಕೈಗೊಳ್ಳಲು ಕಾರಣವೇನು? ಸರ್ಕಾರದ ಈ ನಡೆಯಿಂದ ವಿದ್ಯಾರ್ಥಿಗಳು ಸಮಸ್ಯೆಗೆ ಸಿಲುಕಿಕೊಂಡರು ಎಂದು ಚಾಟಿ ಬೀಸಿದರು.

    ವಿರೋಧ ಪಕ್ಷದ ಸಂಸದರ ಒತ್ತಾಯಕ್ಕೆ ಮಣಿದ ಅಂಚೆ ಇಲಾಖೆ ಸಚಿವ ರವಿ ಶಂಕರ್ ಪ್ರಸಾದ್ ಅವರು, ಕೇಂದ್ರ ಸರ್ಕಾರದ ಅಂಚೆ ಇಲಾಖೆಯ ವಿವಿಧ ಹುದ್ದೆಗಳಿಗೆ ಜುಲೈ 14ರಂದು ನಡೆದ ಪರೀಕ್ಷೆಯನ್ನು ರದ್ದುಗೊಳಿಸಲಾಗುತ್ತದೆ. ಈ ಮೂಲಕ 15 ಪ್ರಾದೇಶಿಕ ಭಾಷೆಗಳಲ್ಲಿ ಮರು ಪರೀಕ್ಷೆ ನಡೆಸಲಾಗುವುದು ಎಂದು ತಿಳಿಸಿದರು.