Tag: Randeep Guleria

  • ಭಾರತದಲ್ಲಿ 2ನೇ ಹಂತದಲ್ಲಿ ಕೊರೊನಾ ಸೋಂಕು ಕಾಣಿಸಿಕೊಳ್ಳಬಹುದು: ಡಾ.ರಣದೀಪ್ ಗುಲೇರಿಯಾ

    ಭಾರತದಲ್ಲಿ 2ನೇ ಹಂತದಲ್ಲಿ ಕೊರೊನಾ ಸೋಂಕು ಕಾಣಿಸಿಕೊಳ್ಳಬಹುದು: ಡಾ.ರಣದೀಪ್ ಗುಲೇರಿಯಾ

    ನವದೆಹಲಿ: ಭಾರತದಲ್ಲಿ ಚಳಿಗಾಲದಲ್ಲಿ 2ನೇ ಹಂತದ ಕೊರೊನಾ ಸೋಂಕು ಕಾಣಿಸಿಕೊಳ್ಳುವ ಸಾಧ್ಯತೆ ಇದೆ ಎಂದು ದೆಹಲಿಯ ಏಮ್ಸ್ ಆಸ್ಪತ್ರೆಯ ನಿರ್ದೇಶಕ ಮತ್ತು ಕೇಂದ್ರ ಸರ್ಕಾರದ ಟಾಸ್ಕ್ ಫೋರ್ಸ್ ಸದಸ್ಯ ರಣದೀಪ್ ಗುಲೇರಿಯಾ ಆತಂಕ ವ್ಯಕ್ತಪಡಿಸಿದ್ದಾರೆ.

    ಸಂದರ್ಶನವೊಂದರಲ್ಲಿ ಮಾತನಾಡಿರುವ ಅವರು ಚೀನಾದ ಭೀತಿ ಭಾರತಕ್ಕೂ ಕಾಡಲು ಆರಂಭಿಸಿದ್ದು, ಸೋಂಕು ಚಳಿಗಾಲದಲ್ಲಿ 2ನೇ ಹಂತದಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆ ಇದೆ ಎಂದು ಎಚ್ಚರಿಸಿದ್ದಾರೆ. ಕೊರೊನಾ ತಾತ್ಕಾಲಿಕವಲ್ಲ ವರ್ಷಕ್ಕೂ ಹೆಚ್ಚಿನ ಕಾಲದ ಸುದೀರ್ಘ ಯುದ್ಧ ಎಂದು ಭಾವಿಸಬೇಕು. ದೇಹದಲ್ಲಿ ಸುದೀರ್ಘ ಕಾಲದಲ್ಲಿರುವ ಸೋಂಕು ಮತ್ತೆ ಮತ್ತೆ ಕಾಣಿಸಿಕೊಳ್ಳಬಹುದು ಎಂದು ಡಾ.ರಣದೀಪ್ ಗುಲೇರಿಯಾ ಕಳವಳ ವ್ಯಕ್ತಪಡಿಸಿದ್ದಾರೆ.

    ದೇಶದಲ್ಲಿ ಕೊರೊನಾ ಆಸ್ಪತ್ರೆಗಳ ಹಾಸಿಗೆಗಳನ್ನು ಹೆಚ್ಚಿಸಲಾಗುತ್ತಿದೆ. ವೆಂಟಿಲೇಟರ್ ವೈದ್ಯಕೀಯ ಸಿಬ್ಬಂದಿಗಳನ್ನು ಹೆಚ್ಚಿಸಲಾಗುತ್ತಿದೆ. ಸರ್ಕಾರಿ ಆಸ್ಪತ್ರೆಗಳಿಂದ ಮಾತ್ರ ಕೊರೊನಾ ವಿನಾಶ ಸಾಧ್ಯವಿಲ್ಲ. ಕೊರೊನಾ ಹೋರಾಟಕ್ಕೆ ಖಾಸಗಿ ಆಸ್ಪತ್ರೆ ಬೆಂಬಲ ಬೇಕು ಎನ್ನುವ ಮೂಲಕ 2ನೇ ಹಂತದ ಹೋರಾಟದ ಮಾಹಿತಿಯನ್ನು ಅವರು ಸಂದರ್ಶನದಲ್ಲಿ ಬಿಚ್ಚಿಟ್ಟಿದ್ದಾರೆ

    ಕೊರೊನಾ ಸೂಚಿ ಭಾರತದಲ್ಲಿ ಇನ್ನೂ ಇಳಿಕೆ ಬಂದಿಲ್ಲ, ಸೋಂಕು ಏರಿಕೆಯಲ್ಲಿದೆ ಈ ನಡುವೆ ಲಾಕ್‍ಡೌನ್ ವಿನಾಯತಿ ನೀಡಿದ್ದು, ಮುಂದಿನ ದಿನಗಳಲ್ಲಿ ಮುನ್ನೆಚ್ಚರಿಕೆ ಕ್ರಮ ಅಗತ್ಯ ಸಮುದಾಯಕ್ಕೆ ಸೋಂಕು ಹರಡುವಿಕೆ ತಡೆಯುವುದು ಆಸ್ಪತ್ರೆಗಳ ಕೈಲಿಲ್ಲ. ಸಮುದಾಯದ ಸೋಂಕು ಹರಡುವುದು ತಡೆಯುವುದು ಜನರ ಕೈಯಲ್ಲಿದೆ. ಆದ್ದರಿಂದ ಜನರು ಹೆಚ್ಚು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಉತ್ತಮ ಎಂದು ಸಲಹೆ ನೀಡಿದ್ದಾರೆ.

  • ಹೈಡ್ರಾಕ್ಸಿಕ್ಲೋರೋಕ್ವಿನ್ ಮಾತ್ರೆಯನ್ನು ಎಲ್ಲರಿಗೂ ನೀಡಲು ಸಾಧ್ಯವಿಲ್ಲ: ಏಮ್ಸ್ ನಿರ್ದೇಶಕ

    ಹೈಡ್ರಾಕ್ಸಿಕ್ಲೋರೋಕ್ವಿನ್ ಮಾತ್ರೆಯನ್ನು ಎಲ್ಲರಿಗೂ ನೀಡಲು ಸಾಧ್ಯವಿಲ್ಲ: ಏಮ್ಸ್ ನಿರ್ದೇಶಕ

    ನವದೆಹಲಿ: ಮಲೇರಿಯಾಗೆ ನೀಡುವ ಹೈಡ್ರಾಕ್ಸಿಕ್ಲೋರೋಕ್ವಿನ್ ಕೊರೊನಾಗೆ ಪರಿಣಾಮಕಾರಿಯೇ ಎಂಬುದರ ಬಗ್ಗೆ ಚರ್ಚೆ ನಡೆಯುತ್ತಿದ್ದು, ಈಗ ಈ ವಿಚಾರದ ಕುರಿತು ಏಮ್ಸ್ ನಿರ್ದೇಶಕ ರಂದೀಪ್ ಗುಲೇರಿಯಾ ಪ್ರತಿಕ್ರಿಯಿಸಿದ್ದಾರೆ.

    ಹೈಡ್ರಾಕ್ಸಿಕ್ಲೋರೋಕ್ವಿನ್ ಕೊರೊನಾಗೆ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ ಎಂದು ಕೆಲ ಲ್ಯಾಬ್‍ಗಳು ವರದಿ ನೀಡಿವೆ. ಈ ವರದಿಗೆ ನೀಡಿದ ಡೇಟಾಗಳು ಗಟ್ಟಿಯಾಗಿಲ್ಲ. ಚೀನಾ ಮತ್ತು ಫ್ರಾನ್ಸ್ ಅಧ್ಯಯನಗಳು ಹೈಡ್ರಾಕ್ಸಿಕ್ಲೋರೋಕ್ವಿನ್ ಮತ್ತು ಅಜಿಥ್ರೊಮೈಸಿನ್ ಗಳು ಗಂಭೀರ ಸ್ಥಿತಿಯಲ್ಲಿರುವ ಕೋವಿಡ್-19 ರೋಗಿಗಳಿಗೆ ಸಹಕಾರಿಯಾಗಲಿದೆ ಎಂದು ತಿಳಿಸಿವೆ ಎಂದು ಹೇಳಿದ್ದಾರೆ.

    ಕೋವಿಡ್-19ಗೆ ಇಲ್ಲಿಯವರೆಗೆ ಯಾವುದೇ ಔಷಧಿ ಸಿಕ್ಕಿಲ್ಲ. ಹೈಡ್ರಾಕ್ಸಿಕ್ಲೋರೋಕ್ವಿನ್ ಎಲ್ಲರಿಗೂ ನೀಡಲು ಸಾಧ್ಯವಿಲ್ಲ. ಇದನ್ನು ಸೇವಿಸುವುದರಿಂದ ಅಡ್ಡ ಪರಿಣಾಮ ಇದೆ. ಹೃದಯ ಬಡಿತಕ್ಕೆ ಇದರಿಂದ ತೊಂದರೆಯಾಗಬಹುದು ಎಂದು ಅಭಿಪ್ರಾಯಪಟ್ಟಿದ್ದಾರೆ.

    ಸಾಕು ಪ್ರಾಣಿಗಳಿಂದ ಕೊರೊನಾ ಹರಡುತ್ತಾ ಎನ್ನುವ ಪ್ರಶ್ನೆಗೆ, ಇಲ್ಲಿಯವರೆಗೆ ಸಾಕು ಪ್ರಾಣಿಗಳಿಂದ ಮಾನವನಿಗೆ ಹರಡಿದ ಬಗ್ಗೆ ಯವುದೇ ಅಧಿಕೃತ ಡೇಟಾ ಇಲ್ಲ. ಮುಖ್ಯವಾಗಿ ಮನುಷ್ಯನಿಂದ ಮನುಷ್ಯನಿಗೆ ಹರಡುತ್ತದೆ. ಸಾಕು ಪ್ರಾಣಿಗಳಿಂದ ಮನುಷ್ಯನಿಗೆ ಬರುವ ಸಾಧ್ಯತೆ ವಿರಳ ಎಂದು ತಿಳಿಸಿದರು.

    ಮಲೇರಿಯಾ ರೋಗದ ವಿರುದ್ಧವಾಗಿ ಹೋರಾಡಲು ರೋಗಿಗಳಿಗೆ ಹೈಡ್ರಾಕ್ಸಿಕ್ಲೋರೋಕ್ವಿನ್ ಮಾತ್ರೆಯನ್ನು ನೀಡಲಾಗುತ್ತಿದೆ. ಭಾರತದಲ್ಲಿ ಇದು ಯಶಸ್ವಿಯಾದ ಹಿನ್ನೆಲೆಯಲ್ಲಿ ಭಾರೀ ಪ್ರಮಾಣದಲ್ಲಿ ಈ ಮಾತ್ರೆಗಳನ್ನು ದೇಶದಲ್ಲಿ ಉತ್ಪಾದನೆ ಮಾಡಲಾಗುತ್ತಿದೆ.

    ಮಲೇರಿಯಾಗೆ ನೀಡುವ ಈ ಹೈಡ್ರಾಕ್ಸಿಕ್ಲೋರೋಕ್ವಿನ್ ಮಾತ್ರೆಯಿಂದಲೇ ಕೊರೊನಾ ಗುಣವಾಗುತ್ತದೆ ಎಂದು ಪೂರ್ಣವಾಗಿ ಹೇಳಲು ಬರುವುದಿಲ್ಲ. ಯಾಕೆಂದರೆ ವಿಶ್ವ ಆರೋಗ್ಯ ಸಂಸ್ಥೆಯೇ ಯಾವುದೇ ಔಷಧಿಯಿಂದ ಕೊರೊನಾ ವಾಸಿಯಾಗಿದ್ದಕ್ಕೆ ಯಾವುದೇ ಪುರಾವೆ ಇಲ್ಲ ಎಂದು ಹೇಳಿದೆ.

    ಪರಿಸ್ಥಿತಿ ಹೀಗಿರುವಾಗ ತಾತ್ಕಾಲಿಕವಾಗಿ ಕೊರೊನಾಗೆ ಯಾವ ಮಾತ್ರೆ ನೀಡಿದರೆ ಕಡಿಮೆಯಾಗುತ್ತದೆ ಎನ್ನುವ ಬಗ್ಗೆ ಕಂಪನಿಯೊಂದು ಅಧ್ಯಯನ ನಡೆಸಿದೆ. ಹಲವು ದೇಶಗಳಲ್ಲಿ ಹೈಡ್ರಾಕ್ಸಿಕ್ಲೋರೋಕ್ವಿನ್ ಮಾತ್ರೆಯಿಂದ ರೋಗಿಗಳು ಗುಣಮುಖರಾಗಿದ್ದಾರೆ ಎಂದು ಜಾಗತಿಕವಾಗಿ ಆರೋಗ್ಯ ಕುರಿತಾಗಿ ಅಧ್ಯಯನ ಮಾಡುವ sermo ಕಂಪನಿ ತಿಳಿಸಿದ ಹಿನ್ನೆಲೆಯಲ್ಲಿ ಈ ಮಾತ್ರೆಗೆ ಬೇಡಿಕೆ ಹೆಚ್ಚಾಗಿದೆ.

    ಅಧ್ಯಯನ ಹೇಳಿದ್ದು ಏನು?
    ಕೊರೊನಾ ತೀವ್ರವಾಗಿ ಹರಡುತ್ತಿರುವ ಯುರೋಪ್, ದಕ್ಷಿಣ ಅಮೆರಿಕ, ಆಸ್ಟ್ರೇಲಿಯಾ ಸೇರಿದಂತೆ ವಿಶ್ವದ 30 ದೇಶಗಳ ಒಟ್ಟು 6,227 ಮಂದಿ ವೈದ್ಯರನ್ನು ಸಂಪರ್ಕಿಸಿ ಅಧ್ಯಯನ ನಡೆಸಲಾಗಿದೆ. ಈ ಪೈಕಿ ಶೇ.37ರಷ್ಟು ಮಂದಿ ಹೈಡ್ರಾಕ್ಸಿಕ್ಲೋರೋಕ್ವಿನ್ ಮಾತ್ರ ಪರಿಣಾಮ ಬೀರಿದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.

    ಕೊರೊನಾ ತಡೆಗಟ್ಟಲು ನೀಡಲಾಗುವ ಔಷಧಿಗಳ ಪೈಕಿ ಶೇ.56 ನೋವು ನಿವಾರಕಗಳು, ಶೇ.41 ಅಜಿಥ್ರೊಮೈಸಿನ್, ಶೇ.33 ಹೈಡ್ರಾಕ್ಸಿಕ್ಲೋರೋಕ್ವಿನ್ ನೀಡಲಾಗುತ್ತಿದೆ. ಈ ಪೈಕಿ ಹೈಡ್ರಾಕ್ಸಿಕ್ಲೋರೋಕ್ವಿನ್ ಮಾತ್ರೆ ಉತ್ತಮ ಪರಿಣಾಮ ಬೀರಿದೆ ಎಂದು ಅಧ್ಯಯನ ತಿಳಿಸಿದೆ.

    ಸ್ಪೇನ್ ಶೇ.72, ಇಟಲಿ ಶೇ.49, ಬ್ರೆಜಿಲ್ ಶೇ.41, ಮೆಕ್ಸಿಕೋ ಶೇ.39, ಫ್ರಾನ್ಸ್ ಶೇ.28, ಅಮೆರಿಕ ಶೇ.23, ಜರ್ಮನಿ ಶೇ.17, ಕೆನಡಾ ಶೇ.16, ಇಂಗ್ಲೆಂಡ್ ಶೇ.13, ಜಪಾನ್ ಶೇ.7 ರಷ್ಟು ರೋಗಿಗಳಿಗೆ ಹೈಡ್ರಾಕ್ಸಿಕ್ಲೋರೋಕ್ವಿನ್ ನೀಡಲಾಗಿದೆ.

    ಅಮೆರಿಕ, ಸ್ಪೇನ್, ಜರ್ಮನಿ, ಬಹರೇನ್, ಬ್ರೆಜಿಲ್, ನೇಪಾಳ, ಭೂತಾನ್, ಅಫ್ಘಾನಿಸ್ತಾನ, ಶ್ರೀಲಂಕಾ, ಮಾಲ್ಡೀವ್ಸ್, ಬಾಂಗ್ಲಾದೇಶ, ಸೀಶೆಲ್ಸ್, ಮಾರಿಷಸ್ ಮತ್ತು ಡೊಮಿನಿಕನ್ ರಿಪಬ್ಲಿಕ್ ದೇಶಗಳಿಗೆ ಮಾತ್ರೆಯನ್ನು ಭಾರತ ರಫ್ತು ಮಾಡಿದೆ.