Tag: Republic day 2020

  • ಪಶ್ಚಿಮ ಬಂಗಾಳ ಬಳಿಕ ಮಹಾರಾಷ್ಟ್ರ, ಬಿಹಾರ, ಕೇರಳ ಟ್ಯಾಬ್ಲೋ ಪ್ರಸ್ತಾವನೆ ತಿರಸ್ಕಾರ

    ಪಶ್ಚಿಮ ಬಂಗಾಳ ಬಳಿಕ ಮಹಾರಾಷ್ಟ್ರ, ಬಿಹಾರ, ಕೇರಳ ಟ್ಯಾಬ್ಲೋ ಪ್ರಸ್ತಾವನೆ ತಿರಸ್ಕಾರ

    ಪಾಟ್ನಾ: ಪಶ್ಚಿಮ ಬಂಗಾಳ ನಂತರ ಮಹಾರಾಷ್ಟ್ರ, ಬಿಹಾರ, ಕೇರಳ ಸ್ತಬ್ಧಚಿತ್ರವನ್ನು ಜನವರಿ 26ರಂದು ನವದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಪರೇಡ್‍ಗೆ ತಿರಸ್ಕರಿಸಲಾಗಿದೆ.

    ಬಿಹಾರ ಮಾಹಿತಿ ಕೇಂದ್ರ ಈ ಬಗ್ಗೆ ಸ್ಪಷ್ಟಗೊಳಿಸಿದೆ. ಪಶ್ಚಿಮ ಬಂಗಾಳ ನಂತರ ಮಹಾರಾಷ್ಟ್ರ, ಬಿಹಾರ, ಕೇರಳ ರಾಜ್ಯ ಕಳಿಸಿದ್ದ ಸ್ತಬ್ಧಚಿತ್ರಗಳ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದೆ.

    ರಕ್ಷಣಾ ಖಾತೆ ಮಾಹಿತಿ ಪ್ರಕಾರ, ತಜ್ಞರ ಸಮಿತಿಯ ಆಕ್ಷೇಪಣೆ ನಂತರ ಬಿಹಾರ ಸ್ತಬ್ಧಚಿತ್ರ ಪ್ರಸ್ತಾಪನೆಯನ್ನು ತಿರಸ್ಕರಿಸಲಾಗಿದೆ. ಪಶ್ಚಿಮ ಬಂಗಾಳ ಸರ್ಕಾರ ಕನ್ಯಾಶ್ರೀ, ಹಸಿರು ರಕ್ಷಣೆ -ಸ್ವಚ್ಛ ಪರಿಸರ ಹಾಗೂ ಜಲ ಧಾರೆ ಪರಿಕಲ್ಪನೆಯ ಪ್ರಸ್ತಾಪನೆಗಳನ್ನು ಸಲ್ಲಿಸಿತ್ತು. ವಿಶಿಷ್ಟ ಪರಿಕಲ್ಪನೆ ಟ್ಯಾಬ್ಲೋ ಆಯ್ಕೆಗೆ ಪ್ರಧಾನ ಮಾನದಂಡ. ಈ ಮೂರರಲ್ಲಿ ಯಾವುದೂ ವಿಶಿಷ್ಟವಲ್ಲ ಎಂದು ಪಶ್ಚಿಮ ಬಂಗಾಳದ ಟ್ಯಾಬ್ಲೋ ಪ್ರಸ್ತಾವನೆಯನ್ನು ತಿರಸ್ಕರಿಸಲಾಗಿತ್ತು.

    ಹಾಗೆಯೇ ಗಣರಾಜ್ಯೋತ್ಸವ ಪರೇಡ್‍ನ ಟ್ಯಾಬ್ಲೋಗಳಲ್ಲಿ ಯಾವುದೇ ರಾಜಕೀಯ ಪಕ್ಷ ಹಾಗೂ ರಾಜಕೀಯ ಅಜೆಂಡಾಗಳ ಪರಿಕಲ್ಪನೆ ಟ್ಯಾಬ್ಲೋ ಮಾಡುವಂತಿಲ್ಲ. ಆದರೆ ಬಿಹಾರ್ ಹಾಗೂ ಮಹಾರಾಷ್ಟ್ರ ರಾಜಕೀಯ ಪರಿಕ್ಪನೆ ಟ್ಯಾಬ್ಲೋಗಳ ಪ್ರಸ್ತಾವನೆ ಸಲ್ಲಿಸಿತ್ತು. ಆದ್ದರಿಂದ ಈ ರಾಜ್ಯಗಳ ಟ್ಯಾಬ್ಲೋಗಳನ್ನು ತಜ್ಞರ ಸಮಿತಿ ತಿರಸ್ಕರಿಸಿದೆ.

    ಈ ಬಗ್ಗೆ ಆರ್‍ಜೆಡಿ ವಕ್ತಾರ ಮ್ರಿತುಂಜನ್ ತಿವಾರಿ ಪ್ರತಿಕ್ರಿಯಿಸಿ, ಈ ಹಿಂದೆ ಕೇಂದ್ರ ಸರ್ಕಾರ ಬಿಹಾರಕ್ಕೆ ವಿಶೇಷ ಸ್ಥಾನಮಾನ ನೀಡಿ ಎಂಬ ಪ್ರಸ್ತಾವನೆಯನ್ನು ತಿರಸ್ಕರಿಸಿತ್ತು. ಈಗ ನಮ್ಮ ಗಣರಾಜ್ಯೋತ್ಸವದ ಟ್ಯಾಬ್ಲೋಗಳನ್ನು ತಿರಸ್ಕರಿದೆ. ಬಿಜೆಪಿ ಎರಡು ಇಂಜಿನ್ ಸರ್ಕಾರ ನಡೆಸುತ್ತಿದೆ ಎನ್ನುವುದಕ್ಕೆ ಇದು ಸಾಕ್ಷಿ ಎಂದು ಕಿಡಿಕಾರಿದ್ದಾರೆ.

    ಇತ್ತ ಮಹಾರಾಷ್ಟ್ರ ಟ್ಯಾಬ್ಲೋ ಪ್ರಸ್ತಾವನೆ ತಿರಸ್ಕೃತಗೊಂಡಿದ್ದಕ್ಕೆ ಎನ್‍ಸಿಪಿ ನಾಯಕಿ ಸುಪ್ರಿಯಾ ಸುಳೆ ಟ್ವೀಟ್ ಮಾಡಿ ಹರಿಹಾಯ್ದಿದ್ದಾರೆ. ಕೇಂದ್ರ ಸರ್ಕಾರ, ಮಹಾರಾಷ್ಟ್ರ, ಪಶ್ಚಿಮ ಬಂಗಾಳ ಟ್ಯಾಂಬ್ಲೋಗಳ ಪ್ರಸ್ತಾವಣೆ ತಿರಸ್ಕರಿಸಿದೆ. ಗಣರಾಜ್ಯೋತ್ಸವ ದೇಶದ ಹಬ್ಬ. ಆದ್ದರಿಂದ ಕೇಂದ್ರ ಸರ್ಕಾರ ಎಲ್ಲಾ ರಾಜ್ಯಗಳಿಗೂ ಈ ಹಬ್ಬದಲ್ಲಿ ಭಾಗಿಯಾಗಲು ಅವಕಾಶ ಕೊಡಬೇಕು. ಆದರೆ ಸರ್ಕಾರ ದಬ್ಬಾಳಿಕೆ ನಡೆಸುತ್ತಿದೆ. ಕೆಲ ರಾಜ್ಯಗಳ ವಿಷಯದಲ್ಲಿ ತಾರತಮ್ಯ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.

    ಹಾಗೆಯೇ ಕೇರಳ ಟ್ಯಾಂಬ್ಲೋ ಪ್ರಸ್ತಾವನೆ ತಿರಸ್ಕೃತಗೊಂಡಿರುವುದು ರಾಜಕೀಯ ಪ್ರೇರಿತ ಎಂದು ಕೇರಳ ಕಾನೂನು ಸಚಿವ ಎ.ಕೆ ಬಾಲನ್ ಕಿಡಿಕಾರಿದ್ದಾರೆ.

    ತಜ್ಞರ ಸಮಿತಿ ರಾಜ್ಯ, ಕೇಂದ್ರಾಡಳಿತ ಪ್ರದೇಶ ಹಾಗೂ ವಿವಿಧ ಇಲಾಖೆಗಳ ಟ್ಯಾಬ್ಲೋ ಪ್ರಸ್ತಾಪನೆಗಳನ್ನು ಪರಿಶೀಲಿಸಿ, ಗಣರಾಜ್ಯೋತ್ಸವ ಪರೇಡ್‍ನ ಪ್ರದರ್ಶನದಲ್ಲಿ ಪಾಲ್ಗೊಳ್ಳುವ ಟ್ಯಾಬ್ಲೋಗಳನ್ನು ಅಂತಿಮಗೊಳಿಸುತ್ತದೆ. 2020ರ ಗಣರಾಜ್ಯೋತ್ಸವ ಪರೇಡ್‍ನಲ್ಲಿ ಭಾಗವಹಿಸಲು ರಾಜ್ಯಗಳಿಂದ 32 ಹಾಗೂ ಕೇಂದ್ರಾಡಳಿತ ಪ್ರದೇಶಗಳಿಂದ 24 ಪ್ರಸ್ತಾವನೆಗಳು ಬಂದಿದ್ದವು. ಅದರಲ್ಲಿ ಒಟ್ಟು 22 ಪ್ರಸ್ತಾಪನೆಗಳನ್ನು ಅಂತಿಮ ಮಾಡಲಾಗಿದೆ.