Tag: Scheduled Tribe

  • ಕುರುಬ ಸಮುದಾಯವನ್ನು ಎಸ್‌ಟಿಗೆ ಸೇರಿಸಲು ರಾಜ್ಯ ಸರ್ಕಾರದಿಂದ ಕೇಂದ್ರಕ್ಕೆ ಶಿಫಾರಸು

    ಕುರುಬ ಸಮುದಾಯವನ್ನು ಎಸ್‌ಟಿಗೆ ಸೇರಿಸಲು ರಾಜ್ಯ ಸರ್ಕಾರದಿಂದ ಕೇಂದ್ರಕ್ಕೆ ಶಿಫಾರಸು

    ಬೆಂಗಳೂರು: ಕುರುಬ ಸಮುದಾಯವನ್ನು (Kuruba Community) ಪರಿಶಿಷ್ಟ ಪಂಗಡ (ST) ಸಮುದಾಯಕ್ಕೆ ಸೇರಿಸುವಂತೆ ರಾಜ್ಯ ಸರ್ಕಾರ ಕೇಂದ್ರಕ್ಕೆ ಶಿಫಾರಸು ಮಾಡಿದೆ.

    ಮಂಗಳವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ನಿರ್ಧಾರ ಮಾಡಲಾಗಿದ್ದು, ಈ ಸಂಬಂಧ ರಾಜ್ಯ ಸರ್ಕಾರದ ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿಯಿಂದ ಕೇಂದ್ರ ಸರ್ಕಾರಕ್ಕೆ ಪತ್ರವನ್ನು ಕಳುಹಿಸಲಾಗಿದೆ. ಇದನ್ನೂ ಓದಿ: ವಿಪಕ್ಷ ನಾಯಕರಿಲ್ಲದೆ ಬಜೆಟ್ ಅಧಿವೇಶನ ನಡೀತಿರೋದು ಇದೇ ಮೊದಲು: ಬಿಜೆಪಿ ವಿರುದ್ಧ ಸಿಎಂ ಗುಡುಗು

    ಈ ಹಿಂದೆ ಮೈಸೂರು, ಚಾಮರಾಜನಗರ ಜಿಲ್ಲೆಯ ಕೆಲ ಪ್ರದೇಶಗಳಲ್ಲಿ ಇದ್ದ ಕಾಡು ಕುರುಬರನ್ನು ಮಾತ್ರವೇ ಎಸ್‌ಟಿ ಪಂಗಡಕ್ಕೆ ಸೇರಿಸಲಾಗಿತ್ತು. ಬಳಿಕ 2020-21ರಲ್ಲಿ ರಾಜ್ಯಾದ್ಯಂತ ಎಲ್ಲಾ ಕುರುಬ ಸಮುದಾಯದವರನ್ನು ಎಸ್‌ಟಿ ಸಮುದಾಯಕ್ಕೆ ಸೇರಿಸುವಂತೆ ನಿರಂಜನಾನಂದ ಪುರಿ ಸ್ವಾಮೀಜಿ ಹಾಗೂ ಸಮುದಾಯದ ಮುಖಂಡರು ಕಾಗಿನೆಲೆಯಿಂದ ಬೆಂಗಳೂರಿನವರೆಗೂ ಬೃಹತ್ ಪಾದಯಾತ್ರೆ ನಡೆಸಿದ್ದರು. ಇದನ್ನೂ ಓದಿ: ಭಾರತದ ಶ್ರೀಮಂತ ಶಾಸಕರಲ್ಲಿ ಡಿ.ಕೆ. ಶಿವಕುಮಾರ್‌ ನಂ.1

    ಈಗ ರಾಜ್ಯಾದ್ಯಂತ ಎಲ್ಲ ಕುರುಬ ಸಮುದಾಯದವರನ್ನು ಎಸ್‌ಟಿಗೆ ಸೇರಿಸುವಂತೆ ರಾಜ್ಯ ಸರ್ಕಾರ ಕೇಂದ್ರಕ್ಕೆ ಶಿಫಾರಸು ಮಾಡಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಪ. ಜಾತಿ, ಪಂಗಡದವರ ಮೇಲಿನ ದೌರ್ಜನ್ಯ – ಬಾಕಿ ಪ್ರಕರಣ ಶೀಘ್ರ ಇತ್ಯರ್ಥಕ್ಕೆ ಕ್ರಮ ವಹಿಸಲು ಸಿಎಂ ಸೂಚನೆ

    ಪ. ಜಾತಿ, ಪಂಗಡದವರ ಮೇಲಿನ ದೌರ್ಜನ್ಯ – ಬಾಕಿ ಪ್ರಕರಣ ಶೀಘ್ರ ಇತ್ಯರ್ಥಕ್ಕೆ ಕ್ರಮ ವಹಿಸಲು ಸಿಎಂ ಸೂಚನೆ

    ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೇಲಿನ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಶೀಘ್ರ ಇತ್ಯರ್ಥಪಡಿಸಲು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಧಿಕಾರಿಗಳಿಗೆ ಸೂಚಿಸಿದರು.

    ಸಿಎಂ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಇಂದು ವಿಧಾನಸೌಧದಲ್ಲಿ ದೌರ್ಜನ್ಯ ಪ್ರತಿಬಂಧ ಅಧಿನಿಯಮ 1989 (ತಿದ್ದುಪಡಿ ಕಾಯ್ದೆ 2015) ಮತ್ತು ನಿಯಮಗಳು 1995 (ತಿದ್ದುಪಡಿ ನಿಯಮಗಳು 2016) ರಡಿ ರಾಜ್ಯಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿಯ ಸಭೆ ನಡೆಯಿತು.

    CM Bommai Meeting SC ST (4)

    ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿಯವರು ಗೃಹ ಮತ್ತು ಕಾನೂನು ಇಲಾಖೆಯೊಂದಿಗೆ ಸಮನ್ವಯ ವಹಿಸಿ, ತನಿಖೆಯ ಹಂತದಲ್ಲಿ, ಚಾರ್ಜ್ ಶೀಟ್ ಸಲ್ಲಿಸುವಾಗ ಹಾಗೂ ಪ್ರಾಸಿಕ್ಯೂಷನ್ ಸಂದರ್ಭದಲ್ಲಿಯೂ ವಿಳಂಬವಾಗದಂತೆ ಕ್ರಮ ವಹಿಸಬೇಕು. ಅಪರಾಧ ಸಾಬೀತು ಪ್ರಮಾಣ ಹೆಚ್ಚಿಸಬೇಕು ಎಂದು ಅವರು ನಿರ್ದೇಶನ ನೀಡಿದರು.

    ಸಭೆಯ ತೀರ್ಮಾನಗಳ ಕುರಿತು ಪ್ರತಿ ತಿಂಗಳೂ ಪರಿಶೀಲನೆ ನಡೆಸುವಂತೆ ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿಗಳಿಗೆ ಸೂಚಿಸಿದರು. ರಾಜ್ಯಮಟ್ಟದ ಸಮಿತಿಯು ತುರ್ತು ವಿಷಯಗಳಿದ್ದಲ್ಲಿ ಮೂರು ತಿಂಗಳಿಗೊಮ್ಮೆ ಸಭೆ ನಡೆಸಲು ನಿರ್ಧರಿಸಲಾಯಿತು. ಮೂರು ತಿಂಗಳಿಗೊಮ್ಮೆ ಜಿಲ್ಲಾಧಿಕಾರಿಗಳು ಹಾಗೂ ಉಪವಿಭಾಗಾಧಿಕಾರಿಗಳ ಹಂತದಲ್ಲಿ ಸಭೆಗಳು ನಿಯಮಿತವಾಗಿ ನಡೆಸಿ, ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಒಂದು ತಿಂಗಳ ಒಳಗೆ ಸಭೆಯ ತೀರ್ಮಾನಗಳ ಕುರಿತು ಕೈಗೊಂಡ ಕ್ರಮಗಳ ಕುರಿತು ವರದಿ ನೀಡಲು ಸೂಚಿಸಿದರು.

    ದೌರ್ಜನ್ಯ ಪ್ರಕರಣಗಳ ದೂರುದಾರರು ಮತ್ತು ಸಾಕ್ಷಿದಾರರ ರಕ್ಷಣೆಗೆ ಒತ್ತು ನೀಡಬೇಕು. ಸೂಕ್ಷ್ಮ ಪ್ರಕರಣಗಳಲ್ಲಿ ದೂರುದಾರರು ಮತ್ತು ಸಾಕ್ಷಿದಾರರನ್ನು ಪೊಲೀಸರೇ ಕರೆದೊಯ್ಯುವಂತೆ ಸೂಚಿಸಿದರು. ಜೊತೆಗೆ ಈ ಪ್ರಕರಣಗಳ ಸಂಪೂರ್ಣ ಮೇಲುಸ್ತುವಾರಿಗೆ ಹೆಚ್ಚುವರಿ ಅಡ್ವೊಕೇಟ್ ಜನರಲ್ ಅವರನ್ನು ನೇಮಕ ಮಾಡಲು ತೀರ್ಮಾನಿಸಲಾಯಿತು. ಇದನ್ನೂ ಓದಿ: ಮೆಟ್ರೋ ಉದ್ಘಾಟನೆ ಕಾರ್ಯಕ್ರಮದಲ್ಲಿ ಕನ್ನಡ ಕಡೆಗಣನೆ- ಶಿಸ್ತು ಕ್ರಮಕ್ಕೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಆಗ್ರಹ

    ಅನುಸೂಚಿತ ಬುಡಕಟ್ಟು ಹಾಗೂ ಇತರ ಪಾರಂಪರಿಕ ಅರಣ್ಯ ವಾಸಿಗಳ ಅಧಿನಿಯಮ 2006 ರಡಿ 1.8 ಲಕ್ಷಕ್ಕೂ ಹೆಚ್ಚು ಅರ್ಜಿಗಳು ತಿರಸ್ಕೃತಗೊಂಡಿವೆ. ಈ ಕುರಿತಂತೆ ರಾಜ್ಯಮಟ್ಟದಲ್ಲಿಯೂ ಮರು ಪರಿಶೀಲನಾ ಸಮಿತಿ ರಚಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು. ಇದಕ್ಕೆ ಮೂವರು ಅಧಿಕಾರೇತರ ಸದಸ್ಯರನ್ನು ನಾಮನಿರ್ದೇಶನ ಮಾಡಬೇಕು ಎಂದು ಮುಖ್ಯಮಂತ್ರಿಗಳು ಸೂಚಿಸಿದರು. ಇದನ್ನೂ ಓದಿ: ಸೆ. 6ರಿಂದ 6 ರಿಂದ 8ನೇ ತರಗತಿ ಶಾಲೆ ಆರಂಭ – ದಕ್ಷಿಣ ಕನ್ನಡ, ಕೊಡಗಿನಲ್ಲಿ ನಿರ್ಬಂಧ ಮುಂದುವರಿಕೆ

    ನಕಲಿ ಜಾತಿ ಪ್ರಮಾಣ ಪತ್ರ ಸಲ್ಲಿಸಿ, ಈ ಸಮುದಾಯಗಳ ಹಕ್ಕು ಕಸಿದುಕೊಳ್ಳುವವರ ವಿರುದ್ಧ ಹಾಗೂ ನಕಲಿ ಜಾತಿ ಪ್ರಮಾಣ ಪತ್ರ ನೀಡಿದವರ ವಿರುದ್ಧ ಕ್ರಮ ಕೈಗೊಳ್ಳಲು ಸೂಚಿಸಿದರು. ದೌರ್ಜನ್ಯ ಪ್ರಕರಣಗಳಲ್ಲಿ ಮೃತಪಟ್ಟವರ ಅವಲಂಬಿತರಿಗೆ ಅನುಕಂಪ ಆಧಾರದಲ್ಲಿ ಸರ್ಕಾರಿ ನೌಕರಿಗೆ ಅರ್ಜಿ ಸಲ್ಲಿಸಲು 2 ವರ್ಷ ಅವಧಿ ಹಾಗೂ ಅಪ್ರಾಪ್ತ ವಯಸ್ಕರಿಗೆ ಅರ್ಜಿ ಸಲ್ಲಿಸಲು 3 ವರ್ಷಗಳ ಅವಧಿ ನಿಗದಿ ಪಡಿಸಿ ನಿಯಮಗಳಿಗೆ ತಿದ್ದುಪಡಿ ಮಾಡುವಂತೆ ಸೂಚಿಸಿದರು.

    ಪರಿಶಿಷ್ಟ ಜಾತಿ, ಪಂಗಡದವರ ಶಿಕ್ಷಣ, ಉದ್ಯೋಗ ಮತ್ತು ಸಬಲೀಕರಣಕ್ಕೆ ಆದ್ಯತೆ ನೀಡಬೇಕು ಎಂದು ಸಲಹೆ ನೀಡಿದ ಮುಖ್ಯಮಂತ್ರಿಗಳು, ಈ ಸಮುದಾಯಗಳ ಕಲ್ಯಾಣ ಕಾರ್ಯಕ್ರಮಗಳನ್ನು ಸಮಯಕ್ಕೆ ಸರಿಯಾಗಿ ಅನುಷ್ಠಾನಗೊಳಿಸುವಂತೆ ಸೂಚಿಸಿದ್ದಾರೆ. ಗಂಗಾ ಕಲ್ಯಾಣ ಯೋಜನೆಯಡಿ ಕೊರೆದ ಕೊಳವೆಬಾವಿಗಳಿಗೆ ವಿದ್ಯುತ್ ಸಂಪರ್ಕ ಒದಗಿಸಲು ಎಸ್ಕಾಂಗಳು ಎಸ್ ಸಿ ಪಿ, ಟಿ ಎಸ್ ಪಿ ಅನುದಾನ ಬಳಕೆ ಮಾಡುವಂತೆ ಸೂಚಿಸಲಾಗಿದೆ. ಎಸ್.ಸಿ.ಪಿ/ ಟಿಎಸ್ ಪಿ ಕಾಯ್ದೆಯನ್ವಯ ಈ ಸಮುದಾಯಗಳಿಗೆ ನಿಗದಿ ಪಡಿಸಿದ ಅನುದಾನ, ಅವರ ಕ್ಷೇಮಾಭಿವೃದ್ಧಿಗೇ ಬಳಕೆಯಾಗುವ ಕುರಿತು ಕಾಯ್ದೆಗೆ ತಿದ್ದುಪಡಿ ಮಾಡಲು ಕ್ರಮ ವಹಿಸುವಂತೆ ಕಾನೂನು ಇಲಾಖೆಗೆ ಸೂಚನೆ ನೀಡಿದರು.

    ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಬಿ. ಶ್ರೀರಾಮುಲು, ಜೆ..ಸಿ. ಮಾಧುಸ್ವಾಮಿ ಸಮಿತಿಯ ಸದಸ್ಯರಾದ ಸಂಸದರು, ಶಾಸಕರು ಮತ್ತು ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಮತ್ತು ಸರ್ಕಾರದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

  • ಎಸ್‍ಸಿ, ಎಸ್‍ಟಿ ಮೀಸಲಾತಿ – 10 ವರ್ಷ ವಿಸ್ತರಿಸಲು ಕೇಂದ್ರ ಸಂಪುಟ ಒಪ್ಪಿಗೆ

    ಎಸ್‍ಸಿ, ಎಸ್‍ಟಿ ಮೀಸಲಾತಿ – 10 ವರ್ಷ ವಿಸ್ತರಿಸಲು ಕೇಂದ್ರ ಸಂಪುಟ ಒಪ್ಪಿಗೆ

    ನವದೆಹಲಿ: ಕೇಂದ್ರ ಕ್ಯಾಬಿನೆಟ್ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಲೋಕಸಭೆ ಮತ್ತು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ನೀಡಲಾಗಿದ್ದ ಮೀಸಲಾತಿ ಅವಧಿಯನ್ನು 10 ವರ್ಷ ವಿಸ್ತರಿಸಲು ಅನುಮೋದನೆ ನೀಡಿದೆ.

    ಪ್ರಸ್ತುತ ಈಗ ಇರುವ ಮೀಸಲಾತಿ ಅವಧಿ 2020ರ ಜನವರಿ 25ಕ್ಕೆ ಮುಕ್ತಾಯವಾಗಲಿರುವ ಹಿನ್ನೆಲೆಯಲ್ಲಿ ಸರ್ಕಾರ 10 ವರ್ಷ ವಿಸ್ತರಿಸಲು ರಚನೆಯಾಗಿದ್ದ ಪ್ರಸ್ತಾಪಕ್ಕೆ ಒಪ್ಪಿಗೆ ನೀಡಿದೆ ಎಂದು ಮೂಲಗಳು ತಿಳಿಸಿವೆ.

    ಸರ್ಕಾರ ಈ ಚಳಿಗಾಲದ ಅಧಿವೇಶನದಲ್ಲಿ ಅವಧಿ ವಿಸ್ತರಿಸುವ ಸಂಬಂಧ ಮಸೂದೆಯನ್ನು ಮಂಡಿಸಲಿದೆ. ಈ ವೇಳೆ ಆಂಗ್ಲೋ ಇಂಡಿಯನ್ ಸಮುದಾಯಕ್ಕೆ ಮೀಸಲಾತಿ ನೀಡುವುದು ಬೇಡ ಎನ್ನುವ ತೀರ್ಮಾನಕ್ಕೆ ಸರ್ಕಾರ ಬಂದಿದೆ ಎಂದು ಮೂಲಗಳು ತಿಳಿಸಿವೆ.

    ಆಂಗ್ಲೋ ಇಂಡಿಯನ್ ಸಮುದಾಯಕ್ಕೆ ನೀಡಲಾಗಿದ್ದ ಮೀಸಲಾತಿ ವಿಚಾರದ ಬಗ್ಗೆ ಕೇಳಲಾದ ಪ್ರಶ್ನೆಗೆ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಮಸೂದೆ ಮಂಡನೆಯಾದಾಗ ಸಂಪೂರ್ಣ ವಿವರ ಲಭ್ಯವಾಗಲಿದೆ ಎಂದಷ್ಟೇ ಪ್ರತಿಕ್ರಿಯಿಸಿದ್ದಾರೆ.

    ಸದ್ಯ ಸಂಸತ್ತಿನಲ್ಲಿ 84 ಪರಿಶಿಷ್ಟ ಜಾತಿ ಮತ್ತು 47 ಮಂದಿ ಪರಿಶಿಷ್ಟ ಪಂಗಡದ ಸದಸ್ಯರಿದ್ದಾರೆ. ರಾಜ್ಯಗಳಲ್ಲಿರುವ ಶಾಸನ ಸಭೆಯಲ್ಲಿ ಒಟ್ಟು 614 ಪರಿಶಿಷ್ಟ ಜಾತಿಯವರಿದ್ದರೆ 554 ಪರಿಶಿಷ್ಟ ಪಂಗಡದ ಸದಸ್ಯರಿದ್ದಾರೆ.

    ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸದಸ್ಯರಿಗೆ ಸಾಂವಿಧಾನಿಕ ತಿದ್ದುಪಡಿ ಮಾಡಿ ಚುನಾವಣೆಯಲ್ಲಿ ಸ್ಪರ್ಧಿಸಲು ಮೀಸಲಾತಿಯನ್ನು ತರಲಾಗಿದೆ. ಈ ಸಮುದಾಯದ ಜನರಿಗೆ ಎಷ್ಟು ಪ್ರಮಾಣದಲ್ಲಿ ಉದ್ಯೋಗದಲ್ಲಿ ಮೀಸಲಾತಿ ನೀಡಬೇಕು ಎನ್ನುವ ಅಧಿಕಾರವನ್ನು ರಾಜ್ಯ ಸರ್ಕಾರಗಳಿಗೆ ನೀಡಲಾಗಿದೆ.

  • ಪರಿಶಿಷ್ಟ ಪಂಗಡಕ್ಕೆ ಶೇ.7.5ರಷ್ಟು ಮೀಸಲಾತಿಗೆ ಒತ್ತಾಯ – ರಾಜಧಾನಿ ತಲುಪಿದ ಬೃಹತ್ ಪಾದಯಾತ್ರೆ

    ಪರಿಶಿಷ್ಟ ಪಂಗಡಕ್ಕೆ ಶೇ.7.5ರಷ್ಟು ಮೀಸಲಾತಿಗೆ ಒತ್ತಾಯ – ರಾಜಧಾನಿ ತಲುಪಿದ ಬೃಹತ್ ಪಾದಯಾತ್ರೆ

    ಬೆಂಗಳೂರು: ಪರಿಶಿಷ್ಟ ಪಂಗಡದವರಿಗೆ ಶೇಕಡಾ 7.5ರಷ್ಟು ಮೀಸಲಾತಿಗೆ ಆಗ್ರಹಿಸಿ ವಾಲ್ಮೀಕಿ ಸಮುದಾಯ ದಾವಣಗೆರೆ ಜಿಲ್ಲೆಯ ರಾಜನಹಳ್ಳಿಯಿಂದ ಕೈಗೊಂಡಿದ್ದ ಪಾದಯಾತ್ರೆ ಬೆಂಗಳೂರು ತಲುಪಿದ್ದು, ಫ್ರೀಡಂ ಪಾರ್ಕ್ ನಲ್ಲಿ ಧರಣಿ ನಡೆಸುತ್ತಿದ್ದಾರೆ.

    ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಪುರಿ ಸ್ವಾಮಿಜಿಯಿಂದ ಪಾದಯಾತ್ರೆ ನೇತೃತ್ವ ವಹಿಸಿದ್ದು, ಧರಣಿಯಲ್ಲಿ ಲಕ್ಷಾಂತರ ಮಂದಿ ಭಾಗಿಯಾಗಿದ್ದಾರೆ. ಮೀಸಲಾತಿಗೆ ಒತ್ತಾಯಿಸಿ ಇಂದು ಬೃಹತ್ ಶಕ್ತಿ ಪ್ರದರ್ಶನಕ್ಕೆ ಫ್ರೀಡಂ ಪಾರ್ಕ್‍ನಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ.

    ಜೂನ್ 9 ರಂದು ಆರಂಭವಾಗಿದ್ದ ಪಾದಯಾತ್ರೆ ಮೂಲಕ ಸಮುದಾಯದ ಸಾವಿರಾರು ಜನರು ಬೆಂಗಳೂರಿಗೆ ಆಗಮಿಸಿದ್ದಾರೆ. ದಾವಣಗೆರೆಯ ರಾಜನಹಳ್ಳಿಯಿಂದ ಆರಂಭಗೊಂಡಿದ್ದ ಪಾದಯಾತ್ರೆಗೆ ರಾಜನಹಳ್ಳಿ, ಜಗಳೂರು, ಚಿತ್ರದುರ್ಗ, ಚಳ್ಳಕೆರೆ, ಹಿರಿಯೂರು, ಶಿರಾ, ತುಮಕೂರು, ನೆಲಮಂಗಲ, ದೊಡ್ಡಬಳ್ಳಾಪುರ, ದೇವನಹಳ್ಳಿ, ಶಿಡ್ಲಘಟ್ಟ, ಹೊಸಕೋಟೆ ಹಾಗೂ ಕೆಆರ್ ಪುರಂ ಮೂಲಕ ಪಾದಯಾತ್ರೆ ನಡೆದಿತ್ತು. ರಾಜ್ಯದ ವಿವಿಧ ಜಿಲ್ಲೆಗಳಿಂದ ವಾಲ್ಮೀಕಿ ಸಮಾಜದ ಜನರು ಧರಣಿಯಲ್ಲಿ ಭಾಗವಹಿಸುತ್ತಿದ್ದಾರೆ. ರಾಜ್ಯ ಸರ್ಕಾರಕ್ಕೆ ತಮ್ಮ ಬೇಡಿಕೆಯ ಮನವರಿಕೆ ಮಾಡುವ ನಿಟ್ಟಿನಲ್ಲಿ ಧರಣಿ ನಡೆಸಲಾಗುತ್ತಿದೆ.

    ಅನಿರ್ದಿಷ್ಟಾ ಅವಧಿಯವರಿಗೆ ಪ್ರತಿಭಟನೆ ಮುಂದುವರಿಯಲಿದೆ. ಇದೇ ಸಂದರ್ಭದಲ್ಲಿ ಮೀಸಲಾತಿ ಹೆಚ್ಚಳ ಮಾಡಬೇಕು ಎಂದು ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಹೊರಟ ಪ್ರಯತ್ನಿಸಿದ್ದು, ಪೊಲೀಸರು ಬಿಗಿ ಬಂದೋಬಸ್ತ್ ವ್ಯವಸ್ಥೆಯನ್ನು ಕಲ್ಪಿಸಿದ್ದಾರೆ. ಇತ್ತ ಹೋರಾಟಗಾರರ ಪ್ರತಿಭಟನೆಯಿಂದ ನಗರದ ಪ್ರಮುಖ ರಸ್ತೆಗಳಲ್ಲಿ ಟ್ರಾಫಿಕ್ ಸಮಸ್ಯೆ ಹೆಚ್ಚಾಗಿದೆ.