Tag: school-colleges

  • ಮಳೆ ಅಬ್ಬರ – ಈ ಜಿಲ್ಲೆಗಳಲ್ಲಿ ಸೋಮವಾರ ಶಾಲಾ, ಕಾಲೇಜುಗಳಿಗೆ ರಜೆ

    ಮಳೆ ಅಬ್ಬರ – ಈ ಜಿಲ್ಲೆಗಳಲ್ಲಿ ಸೋಮವಾರ ಶಾಲಾ, ಕಾಲೇಜುಗಳಿಗೆ ರಜೆ

    ಬೆಂಗಳೂರು: ರಾಜ್ಯದ ಹಲವೆಡೆ ಮುಂಗಾರಿನ ಅಬ್ಬರ ಜೋರಾಗಿದೆ. ಮಳೆಯ ಆರ್ಭಟ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಹಲವು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ಸೋಮವಾರ ರಜೆ ಘೋಷಿಸಲಾಗಿದೆ.

    ಹಾಸನ
    ಹಾಸನ ಜಿಲ್ಲೆಯಾದ್ಯಂತ ಭಾರೀ ಮಳೆ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಜಿಲ್ಲೆಯ ಐದು ತಾಲ್ಲೂಕುಗಳ ಪ್ರಾಥಮಿಕ ಮತ್ತು ಪ್ರೌಡಶಾಲೆ ಹಾಗೂ ಅಂಗನವಾಡಿಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಸಿ.ಸತ್ಯಭಾಮ ಆದೇಶ ಹೊರಡಿಸಿದ್ದಾರೆ. ಕಳೆದ ಮೂರ್ನಾಲ್ಕು ದಿನಗಳಿಂದ ಜಿಲ್ಲೆಯ ಮಲೆನಾಡು ಭಾಗ ಸೇರಿ ವಿವಿಧೆಡೆ ವರುಣ ಅಬ್ಬರಿಸುತ್ತಿದ್ದು, ನಾಳೆ ಮಳೆಯ ಪ್ರಮಾಣ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಸಕಲೇಶಪುರ, ಆಲೂರು, ಬೇಲೂರು, ಅರಕಲಗೂಡು ಹಾಗೂ ಹಾಸನ ತಾಲ್ಲೂಕಿನ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಅಂಗನವಾಡಿಗಳಿಗೆ ರಜೆ ನೀಡಲಾಗಿದ್ದು, ಕಾಲೇಜುಗಳಿಗೆ ರಜೆ ನೀಡಿಲ್ಲ.

    ಶಿವಮೊಗ್ಗ
    ಶಿವಮೊಗ್ಗ ಜಿಲ್ಲೆಯಾದ್ಯಂತ ಕಳೆದ ಎರಡು‌ ದಿನಗಳಿಂದ ಮಳೆಯಾಗುತ್ತಿರುವ ಹಿನ್ನೆಲೆ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಸೂಚನೆ ಮೇರೆಗೆ ಡಿಡಿಪಿಐ ಪರಮೇಶ್ವರಪ್ಪ ರಜೆ ಘೋಷಿಸಿ ಆದೇಶಿಸಿದ್ದಾರೆ. ಕಳೆದ ಎರಡು ದಿನಗಳಿಂದ ಮಳೆ ಅಬ್ಬರಿಸುತ್ತಿದ್ದು, ಭಾನುವಾರ ಇಡೀ ದಿನ ಮಳೆಯಾಗಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ. ಸೋಮವಾರ ಕೂಡ ಮಳೆ ಮುಂದುವರೆಯುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾಧಿಕಾರಿ ರಜೆ ಘೋಷಿಸಿ ಆದೇಶಿಸಿದ್ದಾರೆ.

    ಧಾರವಾಡ
    ಜಿಲ್ಲೆಯ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಧಾರವಾಡ ಜಿಲ್ಲಾಧಿಕಾರಿ ಗುರುದತ್ ಹೆಗಡೆ ರಜೆ ಘೋಷಿಸಿದ್ದಾರೆ. ಶಾಲಾ‌ ಮಕ್ಕಳ ಹಿತರಕ್ಷಣೆ ಉದ್ದೇಶದಿಂದ ರಜೆ ಘೋಷಿಸಿದ್ದು, ಈ ಬಗ್ಗೆ ಕ್ರಮ ವಹಿಸಲು ಶಾಲಾ ಶಿಕ್ಷಣ ಇಲಾಖೆಗೆ ಸೂಚಿಸಲಾಗಿದೆ ನೀಡಲಾಗಿದೆ.

    ಹಾವೇರಿ
    ಹಾವೇರಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಶಾಲಾ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ರಘುನಂದನ ಮೂರ್ತಿ ಆದೇಶ ಹೊರಡಿಸಿದ್ದಾರೆ. ಪದವಿ ಮತ್ತು ಐಟಿಐ ಕಾಲೇಜುಗಳು ಎಂದಿನಂತೆ ನಡೆಯಲಿವೆ.

    ಉಡುಪಿ
    ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ. ಅಪಾಯದ ಮಟ್ಟ ಮೀರಿ ನದಿ ನೀರು ಹರಿಯುತ್ತಿರುವ ಹಿನ್ನೆಲೆ ಮುಂಜಾಗೃತ ಕ್ರಮವಾಗಿ ಜಿಲ್ಲೆಯಾದ್ಯಂತ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ನೀಡಲಾಗಿದೆ.

    ದಾವಣಗೆರೆ
    ಜಿಲ್ಲೆಯ ಮೂರು ತಾಲ್ಲೂಕಿನ ಶಾಲೆಗಳಿಗೆ ರಜೆ ನೀಡಲಾಗಿದೆ. ಚನ್ನಗಿರಿ, ಹೊನ್ನಾಳಿ ಹಾಗೂ ನ್ಯಾಮತಿ ತಾಲ್ಲೂಕಿನಾದ್ಯಂತ ಶಾಲೆಗಳಿಗೆ ನಾಳೆ ರಜೆ ಇದೆ. ಅಯಾ ತಾಲ್ಲೂಕು ಅಡಳಿತ ಹಾಗೂ ಶಿಕ್ಷಣ ಇಲಾಖೆಯಿಂದ ಅದೇಶ ಹೊರಡಿಸಲಾಗಿದೆ.

    ಚಿಕ್ಕಮಗಳೂರು
    ಜಿಲ್ಲೆಯ ಕೊಪ್ಪ ತಾಲ್ಲೂಕಿನ‌ ಶಾಲಾ‌-ಕಾಲೇಜುಗಳಿಗೆ ನಾಳೆ ರಜೆ ಘೋಷಿಸಿ ತಹಶೀಲ್ದಾರ್‌ ಆದೇಶಿಸಿದ್ದಾರೆ.

    ಬೆಳಗಾವಿ
    ವ್ಯಾಪಕ ಮಳೆಯಾಗುತ್ತಿರುವ ಕಾರಣ ಬೆಳಗಾವಿಯ ಖಾನಾಪುರ, ಬೆಳಗಾವಿ, ಕಿತ್ತೂರ ತಾಲ್ಲೂಕಿನ ಶಾಲೆಗಳಿಗೆ ನಾಳೆ ರಜೆ ಘೋಷಿಸಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಆದೇಶ ಹೊರಡಿಸಿದ್ದಾರೆ.

    ಉತ್ತರ ಕನ್ನಡ
    ಉತ್ತರ ಕನ್ನಡ ಜಿಲ್ಲೆಯಾದ್ಯಾಂತ ಶಾಲಾ-ಕಾಲೇಜುಗಳಿಗೆ (ಅಂಗನವಾಡಿಯಿಂದ ದ್ವಿತೀಯ ಪಿಯು ವರೆಗೆ) ರಜೆ ಘೋಷಿಸಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಆದೇಶ ಹೊರಡಿಸಿದ್ದಾರೆ. ಹೊನ್ನಾವರ ತಾಲ್ಲೂಕಿನಲ್ಲಿ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ತಾಲ್ಲೂಕಿನ ಅಂಗನವಾಡಿ, ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ಸೋಮವಾರ ರಜೆ ಘೋಷಿಸಿ ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಎಸ್.ನಾಯ್ಕ ಆದೇಶಿಸದ್ದಾರೆ. ಹೊನ್ನಾವರ ವ್ಯಾಪ್ತಿಯ ಗುಂಡಬಾಳ ನದಿ, ಭಾಸ್ಕೇರಿ ಹೊಳೆ ಉಕ್ಕಿ ಹರಿಯುತ್ತಿರುವ ಪರಿಣಾಮ ಹಲವು ಗ್ರಾಮಗಳಿಗೆ ಎದುರಾಗಿರುವ ಪ್ರವಾಹ ಆತಂಕ ಸೃಷ್ಟಿಯಾಗಿದೆ. ಹಲವೆಡೆ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿರುವ ಹಿನ್ನಲೆಯಲ್ಲಿ ರಾತ್ರಿ ಮತ್ತೆ ನದಿ, ಹೊಳೆ ಹರಿವು ಹೆಚ್ಚುವ ಸಾಧ್ಯತೆ ಇದ್ದು, ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಐದು ದಿನಗಳಿಂದ ಸುರಿಯುತ್ತಿದೆ ಮಳೆ – ಉಡುಪಿಯಲ್ಲಿ ಕೃತಕ ನೆರೆ ಸೃಷ್ಟಿ

    ಐದು ದಿನಗಳಿಂದ ಸುರಿಯುತ್ತಿದೆ ಮಳೆ – ಉಡುಪಿಯಲ್ಲಿ ಕೃತಕ ನೆರೆ ಸೃಷ್ಟಿ

    ಉಡುಪಿ: ಎಡೆಬಿಡದೆ ಮಳೆಯಾಗುತ್ತಿದ್ದು, ಐದು ದಿನಗಳಿಂದ ಧಾರಾಕಾರವಾಗಿ ಮಳೆ ಸುರಿಯುತ್ತಿರುವುದರಿಂದ ಉಡುಪಿ ಜಿಲ್ಲೆಯಲ್ಲಿ ಕೃತಕ ನೆರೆ ಸಂಭವಿಸಿದೆ.

    ಐದು ದಿನಗಳಿಂದ ನಿರಂತರಂತರವಾಗಿ ಮಳೆ ಸುರಿಯುತ್ತಿರುವುದರಿಂದ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು, ಕಾಲುವೆ ಸಮೀಪದ ಮನೆಗಳಲ್ಲಿ ನೀರು ತುಂಬಿಕೊಂಡಿದೆ. ಕಲ್ಸಂಕ, ಅಂಬಾಗಿಲು ವ್ಯಾಪ್ತಿಯಲ್ಲಿ ಕೃತಕ ನೆರೆ ಸಂಭವಿಸಿದೆ. ಭಾರೀ ಮಳೆಯಿಂದ ಕಾಲುವೆಗಳು ಉಕ್ಕಿ ಹರಿಯುತ್ತಿದ್ದು, ರಸ್ತೆಗಳಲ್ಲಿಯೂ ನೀರು ತುಂಬಿಕೊಂಡಿದೆ. ಹೀಗಾಗಿ ವಾಹನ ಸವಾರರು ಹಾಗೂ ಪಾದಚಾರಿಗಳು ರಸ್ತೆಯಲ್ಲಿ ಕಷ್ಟಪಟ್ಟು ಸಂಚರಿಸುತ್ತಿದ್ದಾರೆ.

    24 ಗಂಟೆಯ ಅವಧಿಯಲ್ಲಿ ಒಟ್ಟು 135 ಮಿಲಿಮೀಟರ್ ಸರಾಸರಿ ಮಳೆ ದಾಖಲಾಗಿದೆ. ಕುಂದಾಪುರದಲ್ಲಿ ಅತೀ ಹೆಚ್ಚು ದಾಖಲಾಗಿದ್ದು, 155 ಮಿಲಿಮೀಟರ್ ಮಳೆ ಸುರಿದಿದೆ. ಇನ್ನು ಉಡುಪಿಯಲ್ಲಿ 130, ಕಾರ್ಕಳದಲ್ಲಿ 90 ಮಿಲಿಮೀಟರ್ ಮಳೆಯಾಗಿದೆ ಎಂದು ಉಡುಪಿ ಹವಾಮಾನ ಇಲಾಖೆ ತಿಳಿಸಿದ್ದು, ನದಿ ಪಾತ್ರದ ಜನ ಎಚ್ಚರಿಕೆಯಿಂದ ಇರುವಂತೆ ಹಾಗೂ ಕಡಲಿಗಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ.

    ನಿರಂತರ ಮಳೆಯಾಗುತ್ತಿರುವುದರಿಂದ ಶಾಲಾ ಕಾಲೇಜಿಗೆ ಘೋಷಿಸಿರುವ ರಜೆಯನ್ನು ವಿಸ್ತರಿಸುವಂತೆ ಪಿಯುಸಿ, ಪದವಿ ವಿದ್ಯಾರ್ಥಿಗಳ ಪೋಷಕರು ಜಿಲ್ಲಾಧಿಕಾರಿಗಳಿಗೆ ಒತ್ತಡ ಹೇರಿದ ಹಿನ್ನೆಲೆ ಉಡುಪಿ ಡಿಸಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಅವರು ಪದವಿ ಕಾಲೇಜುಗಳಿಗೂ ರಜೆ ವಿಸ್ತರಿಸಿ ಆದೇಶ ಹೊರಡಿಸಿದ್ದಾರೆ. ಈವರೆಗೆ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಮಾತ್ರ ರಜೆ ಘೋಷಿಸಲಾಗಿತ್ತು. ಭಾರೀ ಗಾಳಿ, ಮಳೆ ಹಾಗೂ ಪೋಷಕರ ಒತ್ತಡದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ತಕ್ಷಣ ಮೌಖಿಕ ರಜೆ ಘೋಷಿಸಿದ್ದಾರೆ.