Tag: Telephone tapping

  • ಎಚ್‍ಡಿಕೆ ದೂರವಾಣಿ ಕದ್ದಾಲಿಕೆ ಮಾಡುವಂತಹ ವ್ಯಕ್ತಿ ಅಲ್ಲ- ಜೆಡಿಎಸ್ ಶಾಸಕ ಶ್ರೀನಿವಾಸಗೌಡ

    ಎಚ್‍ಡಿಕೆ ದೂರವಾಣಿ ಕದ್ದಾಲಿಕೆ ಮಾಡುವಂತಹ ವ್ಯಕ್ತಿ ಅಲ್ಲ- ಜೆಡಿಎಸ್ ಶಾಸಕ ಶ್ರೀನಿವಾಸಗೌಡ

    ಕೋಲಾರ: ಮಾಜಿ ಸಿಎಂ ಕುಮಾರಸ್ವಾಮಿ ದೂರವಾಣಿ ಕದ್ದಾಲಿಕೆ ಮಾಡುವಂತಹ ವ್ಯಕ್ತಿ ಅಲ್ಲ, ಆ ಮಟ್ಟಕ್ಕೆ ಹೋಗುವವರು ಅವರಲ್ಲ ಎಂದು ಕೋಲಾರದಲ್ಲಿ ಜೆಡಿಎಸ್ ಶಾಸಕ ಶ್ರೀನಿವಾಸಗೌಡ ಹೆಚ್‍ಡಿಕೆ ಪರ ಬ್ಯಾಟಿಂಗ್ ಮಾಡಿದ್ದಾರೆ.

    ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ ಹಮ್ಮಿಕೊಂಡಿದ್ದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಭಾಗಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೂರವಾಣಿ ಕದ್ದಾಲಿಕೆ ಮಾಡಿದರೆ ತಪ್ಪಾಗುತ್ತೆ. ಆದರೆ ಅದರ ಬಗ್ಗೆ ಸರಿಯಾಗಿ ನನಗೆ ಮಾಹಿತಿ ಗೊತ್ತಿಲ್ಲ. ಓದಿ ತಿಳಿದುಕೊಂಡು ಅದರ ಕುರಿತಾಗಿ ಮಾತನಾಡುವೆ. ಆದರೆ ಕುಮಾರಸ್ವಾಮಿ ಹೀಗೆ ಮಾಡಿರಲ್ಲ ಬಿಡಿ, ಅತೃಪ್ತ ಶಾಸಕರು ಪಕ್ಷ ಬಿಟ್ಟು ಹೋಗಿರುವ ಹಿನ್ನೆಲೆ ಹೀಗೆ ಅರೋಪ ಮಾಡುತ್ತಿದ್ದಾರೆ ಎಂದು ದೂರಿದರು.

    ಇದೇ ವೇಳೆ ಮಾತನಾಡಿದ ಕೋಲಾರ ಸಂಸದ ಎಸ್. ಮುನಿಸ್ವಾಮಿ, ರಾಜ್ಯದಲ್ಲಿ ನೆರೆ ಇದೆ ಈ ರೀತಿಯ ಸಂದರ್ಭದಲ್ಲಿ ಹೀಗೆ ಮಾಡಲು ಅವರಿಗೆ ನಾಚಿಕೆಯಾಗಬೇಕು. ಈಗಾಗಲೇ ಜನ ಅವರನ್ನು ತಿರಸ್ಕಾರ ಮಾಡಿದ್ದಾರೆ ಹಾಗಾಗಿಯೇ ಮನೆಗೆ ಹೋಗಿದ್ದಾರೆ. ಮನೆಯಲ್ಲಿ ಸುಮ್ಮನಿರುವುದು ಬಿಟ್ಟು ಹೀಗೆ ಕದ್ದಾಲಿಕೆ ಮಾಡುತ್ತಿದ್ದಾರೆ ಎಂದು ಹೇಳುವ ಮೂಲಕ ದೂರವಾಣಿ ಕದ್ದಾಲಿಕೆ ಸಮ್ಮಿಶ್ರ ಸರ್ಕಾರವಿದ್ದಾಗಾಗಿರುವುದು ಎಂಬ ಅರಿವೆ ಅವರಿಗಿಲ್ಲ ಎಂಬುದನ್ನು ತೋರಿಸಿದರು.

    ನೆರೆ ಬಂದು ಸಂಕಷ್ಟದಲ್ಲಿರುವಾಗ ಸಚಿವ ಸಂಪುಟ ವಿಸ್ತರಣೆ ಸರಿಯಲ್ಲ ಹಾಗಾಗಿ ಸಂಪುಟ ವಿಸ್ತರಣೆಯಾಗಿಲ್ಲ. ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಗೃಹ ಸಚಿವ ಅಮಿತ್ ಶಾ ನೆರೆ ವೀಕ್ಷಣೆ ಮಾಡಿದ್ದಾರೆ. ತಡವಾದರೂ ಶೇ.100 ರಷ್ಟು ಕೇಂದ್ರದಿಂದ ಬರ ಪರಿಹಾರ ಸಿಗುತ್ತೆ ಎಂದು ಭರವಸೆ ನೀಡಿದರು.

  • ಮೈತ್ರಿ ಸರ್ಕಾರದಲ್ಲಿ ಸಿದ್ದರಾಮಯ್ಯ ಸೇರಿದಂತೆ ನಮ್ಮ ಫೋನ್ ಕದ್ದಾಲಿಕೆ ಮಾಡಿದ್ದರು- ರೇಣುಕಾಚಾರ್ಯ

    ಮೈತ್ರಿ ಸರ್ಕಾರದಲ್ಲಿ ಸಿದ್ದರಾಮಯ್ಯ ಸೇರಿದಂತೆ ನಮ್ಮ ಫೋನ್ ಕದ್ದಾಲಿಕೆ ಮಾಡಿದ್ದರು- ರೇಣುಕಾಚಾರ್ಯ

    ದಾವಣಗೆರೆ: ಮೈತ್ರಿ ಸರ್ಕಾರದ ಆಡಳಿತಾವಧಿಯಲ್ಲಿ ನನ್ನ ಫೋನ್ ಕರೆಗಳನ್ನು ಕದ್ದಾಲಿಕೆ ಮಾಡಿದ್ದರು ಎಂದು ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರು ಹೊಸ ಬಾಂಬ್ ಸಿಡಿಸಿದ್ದಾರೆ.

    ಪ್ರವಾಹ ಸಮಯದಲ್ಲಿ ಸಂತ್ರಸ್ತರ ನೆರವಿಗೆ ಧವಿಸಿದ್ದ ರೇಣುಕಾಚಾರ್ಯ ಅವರು, ಸಣ್ಣ ಪ್ರಮಾಣದ ನೀರಿನಲ್ಲಿ ಹುಟ್ಟು ಹಾಕಿ ಟ್ರೋಲಾಗಿದ್ದರು. ಈ ಸುದ್ದಿ ಬಿತ್ತರಿಸಿದ ಮಾಧ್ಯಮದವರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು. ಇದೀಗ ಮೈತ್ರಿ ಸರ್ಕಾರದ ಆಡಳಿತಾವಧಿಯಲ್ಲಿ ನನ್ನ ಫೋನ್ ಕರೆಗಳನ್ನು ಕದ್ದಾಲಿಕೆ ಮಾಡಲಾಗಿತ್ತು ಎಂದು ಬಾಂಬ್ ಸಿಡಿಸಿದ್ದಾರೆ.

    ಈ ಕುರಿತು ಜಿಲ್ಲೆಯ ಹೊನ್ನಾಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಸಿಎಂ ಆಗಿದ್ದಾಗ ಹೇಗಾದರು ಮಾಡಿ ಅಧಿಕಾರ ಉಳಿಸಿಕೊಳ್ಳಬೇಕೆಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರದ್ದು ಸೇರಿದಂತೆ ನನ್ನ ಹಾಗೂ ಹಲವು ನಾಯಕರ ಫೋನ್ ಕದ್ದಾಲಿಕೆ ಮಾಡಿದ್ದರು ಎಂದು ಜೆಡಿಎಸ್‍ನ ಕೆಲವು ನಾಯಕರು ನನಗೆ ತಿಳಿಸಿದ್ದಾರೆ ಎಂದರು.

    ಫೋನ್ ಕರೆಗಳನ್ನು ಕದ್ದಾಲಿಕೆ ಮಾಡಿರುವುದನ್ನು ಖಂಡಿಸುತ್ತೇವೆ. ನಾವು ಆಪರೇಷನ್ ಕಮಲ ಮಾಡಿಲ್ಲ, ಬಿಜೆಪಿಯ ಮುಂಚೂಣಿಯಲ್ಲಿ ಹೋರಾಟ ಮಾಡುತ್ತಿದ್ದವರ ಹಾಗೂ ಬಿಜೆಪಿಯ ಪ್ರಮುಖ ಮುಖಂಡರ ಫೋನ್ ಕರೆಗಳನ್ನು ಕದ್ದಾಲಿಕೆ ಮಾಡಲಾಗಿದೆ. ಈ ಕುರಿತು ಸಿಬಿಐ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ. ನೆರೆ ಸಂತ್ರಸ್ತರ ವಿಷಯದಲ್ಲಿ ರಾಜಕೀಯ ಮಾಡಬಾರದು. ಈ ಹಿಂದೆಯೂ ಸಹ ಬರ ಎದುರಾದಾಗ ಸಿದ್ದರಾಮಯ್ಯನವರು ಹಾಗೂ ಕುಮಾರಸ್ವಾಮಿಯವರು ರಾಜ್ಯದ ಪ್ರವಾಸ ಮಾಡಿರಲಿಲ್ಲ. ಆದರೆ, ಬಿಎಸ್‍ವೈ ಒಬ್ಬರೇ ಈಡೀ ರಾಜ್ಯವನ್ನು ಸುತ್ತಿ ಬರ ಅಧ್ಯಾಯನ ನಡೆಸಿದ್ದರು ಎಂದು ತಿಳಿಸಿದರು.

    ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ, ಸಚಿವ ಸ್ಥಾನ ನೀಡಿದರೆ ನಿಭಾಯಿಸುತ್ತೇನೆ. ಮಂತ್ರಿ ಸ್ಥಾನ ನೀಡುವುದು, ಬಿಡುವುದು ಹೈ ಕಮಾಂಡ್ ಹಾಗೂ ಮುಖ್ಯಮಂತ್ರಿಗಳಿಗೆ ಬಿಟ್ಟ ವಿಚಾರ ಎಂದು ಸಚಿವ ಸ್ಥಾನದ ಮೇಲಿನ ಆಸೆಯನ್ನು ಪರೋಕ್ಷವಾಗಿ ಹೊರ ಹಾಕಿದರು.

  • ಫೋನ್ ಕದ್ದಾಲಿಕೆ ಯಾಕೆ? ಹೇಗೆ? ಯಾರು ಮಾಡಬಹುದು?

    ಫೋನ್ ಕದ್ದಾಲಿಕೆ ಯಾಕೆ? ಹೇಗೆ? ಯಾರು ಮಾಡಬಹುದು?

    ರಾಜ್ಯ ರಾಜಕಾರಣದಲ್ಲಿ ಸದ್ಯ ಫೋನ್ ಕದ್ದಾಲಿಕೆ(ಫೋನ್ ಟ್ಯಾಪಿಂಗ್) ಕುರಿತ ಆರೋಪ ಪ್ರತ್ಯಾರೋಪ ಹೆಚ್ಚಾಗಿದ್ದು, ಮೈತ್ರಿ ಸರ್ಕಾರದ ಮೇಲೆ ಬಿಜೆಪಿ ಫೋನ್ ಕದ್ದಾಲಿಕೆ ಕುರಿತ ಗಂಭೀರ ಆರೋಪ ಮಾಡಿದೆ. ಫೋನ್ ಕದ್ದಾಲಿಕೆ ಆರೋಪ ಬರುವುದು ಇದೇ ಮೊದಲೆನಲ್ಲ. ಈ ಹಿಂದೆ ಕೇಂದ್ರ ಸರ್ಕಾರದ ವಿರುದ್ಧವೂ ಫೋನ್ ಕದ್ದಾಲಿಕೆ ಆರೋಪ ಕೇಳಿ ಬಂದಿತ್ತು. ಹೀಗಾಗಿ ಇಲ್ಲಿ ಫೋನ್ ಕದ್ದಾಲಿಕೆ ಎಂದರೇನು? ಯಾರು ಮಾಡಬಹುದು? ಹೇಗೆ ಮಾಡುತ್ತಿದ್ದಾರೆ ಎನ್ನುವ ವಿಚಾರವನ್ನು ವಿವರಿಸಲಾಗಿದೆ.

    ಕ್ರಿಮಿನಲ್ ಕೃತ್ಯ ಎಸಗಲಿರುವವರನ್ನು, ಎಸಗಿದವರನ್ನು ಎಲ್ಲೇ ಅಡಗಿದ್ದರೂ ಪತ್ತೆ ಹಚ್ಚಿ ಅವರನ್ನು ಪತ್ತೆ ಹಚ್ಚಲು ಫೋನ್ ಕದ್ದಾಲಿಕೆ ಮಾಡಲಾಗುತ್ತದೆ. ಕಾನೂನಿನ ಅನ್ವಯ ಸರ್ಕಾರದ ಕೆಲವೇ ಇಲಾಖೆಗಳಿಗೆ ಮಾತ್ರ ಫೋನ್ ಕದ್ದಾಲಿಕೆ ಮಾಡಲು ಅವಕಾಶವಿದ್ದು, ಈಗ ಕೆಲವು ಸಮಾಜ ಘಾತುಕ ಶಕ್ತಿಗಳು ಫೋನ್ ಟ್ಯಾಪಿಂಗ್ ಮಾಡಲು ಆರಂಭಿಸಿವೆ. ಇಂದು ರಾಜಕಾರಣಿಗಳು, ಗಣ್ಯ ವ್ಯಕ್ತಿಗಳ ಫೋನ್ ಟ್ಯಾಪಿಂಗ್ ಹೆಚ್ಚಾಗುತ್ತಿದ್ದು, ಅಡಳಿತ ಪಕ್ಷದ ವಿರುದ್ಧ ವಿರೋಧಿ ಪಕ್ಷಗಳು ಫೋನ್ ಕದ್ದಾಲಿಕೆ ಆರೋಪ ಮಾಡುತ್ತಿದೆ.

     

    ಏನಿದು ಫೋನ್ ಪದ್ದಾಲಿಕೆ?
    ವಿಶೇಷ ಎಲೆಕ್ಟ್ರಾನಿಕ್ ಸಾಧನಗಳ ನೆರವಿನಿಂದ ಇಬ್ಬರು ಮಾತನಾಡುತ್ತಿರುವುದನ್ನು ಮೂರನೇಯವರು ಕದ್ದಾಲಿಸುವುದು ಫೋನ್ ಕದ್ದಾಲಿಕೆ. ಫೋನ್ ಕದ್ದಾಲಿಕೆಗೆ ಕಾನೂನಿನಡಿ ಅವಕಾಶವೂ ಇದೆ. ಆದರೆ ಇದಕ್ಕೆ ನಿರ್ದಿಷ್ಟ ರೀತಿ ನೀತಿಗಳಿವೆ. ಅದು ಹೊರತಾಗಿ ಕದ್ದಾಲಿಸಿದರೆ ಅದು ಕಾನೂನಿನ ಅಡಿ ಅಪರಾಧವಾಗುತ್ತದೆ.

    ಆಧುನಿಕ ತಂತ್ರಜ್ಞಾನ ಬೆಳೆದಂತೆ ಫೋನ್ ಕದ್ದಾಲಿಕೆ ಮಾಡಲೆಂದೇ ಹೊಸ ಸಾಧನಗಳು ತಯಾರಾಗಿವೆ. ಅಲ್ಲದೇ ದೇಶ ವಿದೇಶದಿಂದ ಫೋನ್ ಕದ್ದಾಲಿಕೆ ಮಾಡುವ ಸಾಧನಗಳು ಅಕ್ರಮವಾಗಿ ದೇಶದೊಳಗೆ ರವಾನಿಸುವ ಜಾಲವೂ ಹುಟ್ಟಿಕೊಂಡಿದೆ. ತಜ್ಞರ ಪ್ರಕಾರ ಈ ಸಾಧನಗಳು ಸುಮಾರು ಎರಡು ಕಿ.ಮೀ. ದೂರದ ವರೆಗಿನ ವ್ಯಕ್ತಿಗಳ ಫೋನ್ ಕರೆಗಳನ್ನು ಕದ್ದಾಲಿಕೆ ಮಾಡುವ ಸಾಮರ್ಥ್ಯ ಹೊಂದಿರುತ್ತವೆ.

    ಯಾರಿಗೆ ಅನುಮತಿ ಇದೆ?
    ಸಮಾಜ ಘಾತುಕ ಶಕ್ತಿಗಳ ಚಲನವಲನ, ಕ್ರಿಮಿನಲ್ ಸಂಚು, ದೇಶದ, ಗಣ್ಯರ ವಿರುದ್ಧ ದಾಳಿಯಂತಹ ಚಟುವಟಿಕೆಗಳನ್ನು ತಡೆಯಲು ಗುಪ್ತಚರ ಸಂಸ್ಥೆಗಳು ಫೋನ್ ಕದ್ದಾಲಿಕೆ ಮಾಡುತ್ತವೆ. ಸಿಬಿಐ, ಗುಪ್ತಚರ ಇಲಾಖೆ, ಕಂದಾಯ ಗುಪ್ತಚರ, ಮಾದಕವಸ್ತು ನಿಯಂತ್ರಣ ದಳ, ಆದಾಯ ತೆರಿಗೆ ಇಲಾಖೆ ಮತ್ತು ಪೋಲಿಸ್ ಇಲಾಖೆ ಕದ್ದಾಲಿಕೆಯನ್ನು ಕಾನೂನಿನ ಅಡಿ ಮಾಡಬಹುದು. ಫೋನ್ ಕದ್ದಾಲಿಸಲು ಉಪಗ್ರಹ ಆಧಾರಿತ ವ್ಯವಸ್ಥೆಗಳು, ಟೆಲಿಫೋನ್ ಎಕ್ಸ್ ಚೇಂಜ್‍ನ ನೆರವಿನೊಂದಿಗೆ ಪ್ರತ್ಯೇಕ ಎಲೆಕ್ಟ್ರಾನಿಕ್ ವ್ಯವಸ್ಥೆಗಳ ಮೂಲಕ ಕದ್ದಾಲಿಕೆ ಮಾಡಲಾಗುತ್ತದೆ.

    ನಿಯಮ ಏನು ಹೇಳುತ್ತೆ: 1885ರ ಇಂಡಿಯನ್ ಟೆಲಿಗ್ರಾಫ್ ಕಾಯ್ದೆ ಸೆಕ್ಷನ್ 5 (2)ರಲ್ಲಿ 419ನೇ ಮತ್ತು 419ಎ ನಿಬಂಧನೆಗಳಲ್ಲಿ ಫೋನ್ ಕರೆಗಳ ಮಾಹಿತಿ ಪಡೆಯುವ, ಕೇಳುವ ಬಗ್ಗೆ ಹೇಳಲಾಗಿದೆ. ರಾಷ್ಟ್ರದ ಹಿತಾಸಕ್ತಿಗೆ ವಿರುದ್ಧವಾಗಿ, ಭದ್ರತೆಗೆ ತೊಂದರೆಯಾಗುವ ವಿಚಾರಗಳಲ್ಲಿ ಫೋನ್ ಕದ್ದಾಲಿಕೆಗೆ ಅವಕಾಶವಿದ್ದು ಕ್ಯಾಬಿನೆಟ್ ಕಾರ್ಯದರ್ಶಿ, ಕಾನೂನು ಕಾರ್ಯದರ್ಶಿ ಈ ಬಗ್ಗೆ ನಿರ್ಧಾರ ಕೈಗೊಂಡು, ಗೃಹ ಇಲಾಖೆಗೆ ಮಾಹಿತಿ ನೀಡಬೇಕು. ಈ ಬಗ್ಗೆ ಗೃಹ ಇಲಾಖೆ 2 ತಿಂಗಳೊಳಗೆ ಪರಿಶೀಲನೆ ನಡೆಸಿ ತೀರ್ಮಾನಿಸಬೇಕು. ಒಂದು ಬಾರಿ ಅನುಮತಿ ನೀಡಿದರೆ ಅದು 6 ತಿಂಗಳ ಅವಧಿಯದ್ದಾಗಿರುತ್ತದೆ. ಹೀಗೆ ಕದ್ದಾಲಿಕೆ ವೇಳೆ ಪಡೆದ ಮಾಹಿತಿಗಳನ್ನು ಬಳಸಿ 2 ತಿಂಗಳೊಳಗೆ ಅವುಗಳನ್ನು ನಾಶಪಡಿಸಬೇಕು. ಇದು ಹೊರತಾಗಿ ಕೋರ್ಟ್ ನಿರ್ದೇಶನದ ಮೇರೆಗೆ ಫೋನ್ ಕದ್ದಾಲಿಕೆಗೆ ಅವಕಾಶವಿದೆ.

    ಒಂದೊಮ್ಮೆ ಫೋನ್ ಕದ್ದಾಲಿಕೆಯಾದರೆ ವ್ಯಕ್ತಿಯ ಖಾಸಗಿ ತನಕ್ಕೆ ಧಕ್ಕೆ ತಂದದ್ದಕ್ಕಾಗಿ ಆತ ಮಾನವ ಹಕ್ಕುಗಳ ಆಯೋಗದ ಮೊರೆ ಹೋಗಬಹುದು. ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಿಸಬಹುದು. ಅಕ್ರಮ ಕದ್ದಾಲಿಕೆ ವಿಚಾರದ ಬಗ್ಗೆ ಭಾರತೀಯ ಟೆಲಿಗ್ರಾಫ್ ಕಾಯ್ದೆಯ ಸೆ26(ಬಿ) ಅಡಿಯಲ್ಲಿ ಕೋರ್ಟ್‍ಗೂ ದೂರು ನೀಡಬಹುದು. ಒಂದು ವೇಳೆ ಕದ್ದಾಲಿಸಿದ್ದು ಸಾಬೀತಾದರೆ ಅಪರಾಧಿಗೆ 3 ವರ್ಷಗಳ ವರೆಗೆ ಕಾರಾಗೃಹ ಶಿಕ್ಷೆ ನೀಡಲು ಕಾನೂನಿನಲ್ಲಿ ಅವಕಾಶವಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv