ಹಾವೇರಿ: ಸಿಡಿಲು ಬಡಿದು ಓರ್ವ ಸಾವನ್ನಪ್ಪಿ, ಇಬ್ಬರು ಗಂಭೀರ ಗಾಯಗೊಂಡ ಘಟನೆ ಹಾವೇರಿ ಜಿಲ್ಲೆ ಹಾನಗಲ್ ಪಟ್ಟಣದ ಹೊರವಲಯದಲ್ಲಿ ನಡೆದಿದೆ.
ಮೃತರನ್ನ ವಿರೇಶ ಹೊಸಮನಿ(25) ಗುರುತಿಸಲಾಗಿದೆ. ಗಾಯಗೊಂಡವರನ್ನ ಶಶಾಂಕ ಮತ್ತು ದೇವರಾಜ ಎಂದು ಗುರುತಿಸಲಾಗಿದೆ. ಹಾನಗಲ್ ಪಟ್ಟಣದಲ್ಲಿ ಯುವಕರು ಟೈಲ್ಸ್ ಕೆಲಸ ಮಾಡುತ್ತಿದ್ದರು.

ಕೆಲಸ ಮುಗಿಸಿಕೊಂಡು ಬೈಕ್ ಮೇಲೆ ಸ್ವಗ್ರಾಮ ಹಸನಾಬಾದಿ ಗ್ರಾಮಕ್ಕೆ ತೆರಳುತ್ತಿದ್ದ ವೇಳೆ ಸಿಡಿಲು ಗುಡುಗಿನೊಂದಿಗೆ ಮಳೆ ಬರುತ್ತಿದ್ದರಿಂದ ಮರದ ಕೆಳಗೆ ನಿಂತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಗಾಯಾಳುಗಳಿಗೆ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಆಸ್ಪತ್ರೆಗೆ ಭೇಟಿ ನೀಡಿ ಮೃತನ ಕುಟುಂಬದವರಿಗೆ ಶಾಸಕ ಶ್ರೀನಿವಾಸ ಮಾನೆ ಸಾಂತ್ವನ ಹೇಳಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು. ಹಾನಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
























