Tag: World bus exhibition

  • ಸಮ್ಮಿಶ್ರ ಸರ್ಕಾರದ ಗೊಂದಲದಿಂದ ಅಭಿವೃದ್ಧಿಗೆ ಹಿನ್ನೆಡೆ ಆಗಲ್ಲ: ಪರಮೇಶ್ವರ್

    ಸಮ್ಮಿಶ್ರ ಸರ್ಕಾರದ ಗೊಂದಲದಿಂದ ಅಭಿವೃದ್ಧಿಗೆ ಹಿನ್ನೆಡೆ ಆಗಲ್ಲ: ಪರಮೇಶ್ವರ್

    ಬೆಂಗಳೂರು: ಸಮ್ಮಿಶ್ರ ಸರ್ಕಾರ ಅಂದರೆ ಗೊಂದಲ ಸರ್ವೆ ಸಾಮಾನ್ಯ. ಅದನ್ನು ಬಗೆಹರಿಸಿಕೊಂಡು ಹೋಗಲು ಒಪ್ಪಿಕೊಂಡಿದ್ದೇವೆ. ಕಾಂಗ್ರೆಸ್-ಜೆಡಿಎಸ್ ಗೊಂದಲದಿಂದ ರಾಜ್ಯದ ಅಭಿವೃದ್ಧಿ ಹಿನ್ನೆಡೆಗೆ ಅವಕಾಶ ಕೊಡುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ್ ಹೇಳಿದ್ದಾರೆ.

    ನೆಲಮಂಗಲ ಸಮೀಪದ ಮಾದವಾರದ ಬೆಂಗಳೂರು ಅಂತರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ ಆಯೋಜಿಸಿರುವ ‘ವಿಶ್ವ ಬಸ್ ಪ್ರದರ್ಶನ’ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ, ನಾವು ಐದು ವರ್ಷ ಪೂರ್ಣವಾಗಿ ಸರ್ಕಾರ ನಡೆಸುತ್ತೇವೆ. ಈ ಬಗ್ಗೆ ಯಾವುದೇ ಗೊಂದಲ ಬೇಡ ಎಂದು ತಿಳಿಸಿದರು.

    ಎಚ್.ಡಿ.ಕುಮಾರಸ್ವಾಮಿ ಅವರೇ ಮುಖ್ಯಮಂತ್ರಿಯಾಗಿ ಇರುತ್ತಾರೆ ಎಂದ ಅವರು, ಇನ್ನು ಸಿದ್ದರಾಮಯ್ಯ ಸಿಎಂ ಆಗುವ ವಿಚಾರಕ್ಕೆ ಪ್ರತಿಕ್ರಿಯಿಸಿ, ಈ ಕುರಿತು ಅವರನ್ನೇ ಹೇಳಬೇಕು. ಯಾರು ಬೇಕಾದರೂ ಮುಖ್ಯಮಂತ್ರಿ ಆಗಬಹುದು. ನೀವೇ ಚುನಾವಣೆಯಲ್ಲಿ ನಿಂತು ಗೆಲುವು ಸಾಧಿಸಿ, ಮುಖ್ಯಮಂತ್ರಿಯಾಗಿ ಎಂದು ಮಾಧ್ಯಮ ಪ್ರತಿನಿಧಿಗಳಿಗೆ ಡಿಸಿಎಂ ಪರಮೇಶ್ವರ್ ಆಫರ್ ಕೊಟ್ಟು ಪರೋಕ್ಷವಾಗಿ ಮಾಜಿ ಸಿಎಂ ಸಿದ್ದರಾಮಯ್ಯಗೆ ಟಾಂಗ್ ನೀಡಿದರು.

    ಆಧುನಿಕ ಬೆಳವಣಿಗೆ ಬಗ್ಗೆ ತಿಳಿದುಕೊಳ್ಳಲು ಇಂತಹ ಪ್ರದರ್ಶನ ಸಹಾಯವಾಗುತ್ತದೆ. ಬೆಂಗಳೂರಿನಲ್ಲಿ ಪ್ರದರ್ಶನ ಆಯೋಜಿಸಿರುವುದರಿಂದ ಕೈಗಾರಿಕೋದ್ಯಮ ಬೆಳವಣಿಗೆಗೆ ಹಾಗೂ ಸಣ್ಣ ಉದ್ಯಮಿಗಳ ಬೆಳವಣಿಗೆಗೆ ಪೂರಕವಾಗುತ್ತದೆ ಎಂದು ತಿಳಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv