ಜಮ್ಮು ಕಾಶ್ಮೀರದಲ್ಲಿ ಗ್ರೆನೇಡ್ ದಾಳಿ ತಪ್ಪಿದ ಭಾರೀ ಅನಾಹುತ – 6 ಜನರಿಗೆ ಗಾಯ

ಶ್ರೀನಗರ: ಜಮ್ಮು ಕಾಶ್ಮೀರದ ಅನಂತ್‍ನಾಗ್‍ನಲ್ಲಿರುವ ಜಿಲ್ಲಾಧಿಕಾರಿ ಕಚೇರಿಯ ಹೊರಗೆ ಭಯೋತ್ಪಾದಕರು ಗ್ರೆನೇಡ್ ದಾಳಿ ನಡೆಸಿದ್ದು 6 ಜನ ಗಂಭೀರ ಗಾಯಗೊಂಡಿದ್ದಾರೆ.

ಶ್ರೀನಗರದಿಂದ 55 ಕಿ.ಮೀ. ದೂರದಲ್ಲಿರುವ ಅನಂತ್‍ನಾಗ್ ಪಟ್ಟಣದಲ್ಲಿ ಇಂದು ಬೆಳಗ್ಗೆ 11 ಗಂಟೆ ಸುಮಾರಿಗೆ ಗಸ್ತಿನಲ್ಲಿದ್ದ ಭದ್ರತಾ ಸಿಬ್ಬಂದಿ ಮೇಲೆ ಭಯೋತ್ಪಾದಕರು ಗ್ರೆನೇಡ್ ದಾಳಿ ನಡೆಸಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಗಸ್ತಿನಲ್ಲಿದ್ದ ಭದ್ರತಾ ಸಿಬ್ಬಂದಿಯನ್ನು ಗುರಿಯಾಗಿಸಿಕೊಂಡು ಉಗ್ರರು ಗ್ರೆನೇಡ್ ದಾಳಿ ನಡೆಸಿದ್ದರು. ಆದರೆ ಗುರಿ ತಪ್ಪಿದ್ದರಿಂದ ಭಾರೀ ಅನಾಹುತ ತಪ್ಪಿದಂತಾಗಿದ್ದು, ಯಾವುದೇ ಸಾವು ಸಂಭವಿಸಿಲ್ಲ. 6 ಜನರಿಗೆ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.

ದಾಳಿಯಲ್ಲಿ 12 ವರ್ಷದ ಬಾಲಕ ಸೇರಿದಂತೆ 6 ಜನ ಗಾಯಗೊಂಡಿದ್ದು, ಮೂವರಿಗೆ ಗಂಭೀರ ಗಾಯಗಳಾಗಿವೆ. ಸ್ಫೋಟ ಸಂಭವಿಸುತ್ತಿದ್ದಂತೆ ಅಲ್ಲಿನ ಭದ್ರತಾ ಪಡೆ ಸುತ್ತುವರಿದಿದ್ದು, ದಾಳಿಯ ಹಿಂದಿರುವ ಭಯೋತ್ಪಾದಕರನ್ನು ಬಂಧಿಸಲು ಬೇಟೆ ಪ್ರಾರಂಭಿಸಿದ್ದಾರೆ. ಈವರೆಗೆ ಯಾವುದೇ ಉಗ್ರ ಸಂಘಟನೆಯು ದಾಳಿಯ ಹೊಣೆ ಹೊತ್ತುಕೊಂಡಿಲ್ಲ.

ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಕಾಶ್ಮೀರದ ಕಣಿವೆಯಲ್ಲಿ ಉಗ್ರರು ಭದ್ರತಾ ಪಡೆ ಮೇಲೆ ನಡೆಸುತ್ತಿರುವ ಎರಡನೇ ದಾಳಿ ಇದಾಗಿದೆ.

ಸೆಪ್ಟೆಂಬರ್ 28ರಂದು ಶ್ರೀನಗರದ ಡೌನ್ ಟೌನ್‍ನಲ್ಲಿ ಉಗ್ರರು ಸಿಆರ್ ಪಿಎಫ್ ಸಿಬ್ಬಂದಿ ಮೇಲೆ ಗ್ರೆನೇಡ್ ಎಸೆದಿದ್ದರು. ಅದೂ ಸಹ ಗುರಿ ತಪ್ಪಿತ್ತು, ಈ ಮೂಲಕ ಆಗಲೂ ಭಾರೀ ಅನಾಹುತ ತಪ್ಪಿದಂತಾಗಿತ್ತು. ಸಿಆರ್ ಪಿಎಫ್‍ನ 38 ಬೆಟಾಲಿಯನ್ ಸಿಬ್ಬಂದಿ ನವಾ ಕಡಲ್ ಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆಗೆ ನಿಯೋಜಿಸಿದ್ದಾಗ ಉಗ್ರರು ಗ್ರೆನೇಡ್ ದಾಳಿ ನಡೆಸಿದ್ದರು.

Comments

Leave a Reply

Your email address will not be published. Required fields are marked *