ತೀವ್ರ ಕುತೂಹಲ ಕೆರಳಿಸಿರುವ ಪರಿಷತ್ ಚುನಾವಣಾ ಫಲಿತಾಂಶ – ಇಂದು ಮತ ಏಣಿಕೆ

ಶಿವಮೊಗ್ಗ: ತೀವ್ರ ಕುತೂಹಲ ಕೆರಳಿಸಿರುವ ವಿಧಾನಪರಿಷತ್ ಚುನಾವಣಾ ಮತಗಳ ಏಣಿಕೆ ಕಾರ್ಯಕ್ಕೆ ನಗರದ ಸಹ್ಯಾದ್ರಿ ಕಾಲೇಜು ಆವರಣದಲ್ಲಿ ಜಿಲ್ಲಾಡಳಿತ ಸಕಲ ಸಿದ್ಧತೆ ಕೈಗೊಂಡಿದೆ.

ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ಗೆ ಡಿಸೆಂಬರ್ 10 ರಂದು ಚುನಾವಣೆ ನಡೆದಿತ್ತು. ಕಣದಲ್ಲಿ ನಾಲ್ವರು ಅಭ್ಯರ್ಥಿಗಳಿದ್ದರೂ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ತೀವ್ರ ಹಣಾಹಣಿ ಏರ್ಪಟ್ಟಿತ್ತು. ಇಂದು ನಗರದ ಸಹ್ಯಾದ್ರಿ ಕಾಲೇಜಿನಲ್ಲಿ ಬೆಳಗ್ಗೆ 8 ಗಂಟೆಯಿಂದ ಮತ ಏಣಿಕೆ ಕಾರ್ಯ ಆರಂಭವಾಗಲಿದೆ. ಇಂದು ಮಧ್ಯಾಹ್ನದ ವೇಳೆಗೆ ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಇದೆ. ಒಂದು ವೇಳೆ ಮೊದಲ ಪ್ರಾಶಸ್ತ್ಯದ ಮತಗಳಲ್ಲಿ ಯಾವೊಬ್ಬ ಅಭ್ಯರ್ಥಿಯೂ ಗೆಲ್ಲದಿದ್ದಲ್ಲಿ, ಎರಡನೇ ಪ್ರಾಶಸ್ತ್ಯದ ಮತಗಳ ಏಣಿಕೆ ಮಾಡಬೇಕಾಗುತ್ತದೆ. ಈ ರೀತಿ ಆದಲ್ಲಿ ಮಾತ್ರ ಫಲಿತಾಂಶ ಪ್ರಕಟವಾಗುವುದು ತಡವಾಗಲಿದೆ. ಇದನ್ನೂ ಓದಿ: ‘ಪಾಕಿಸ್ತಾನಿ ಆಹಾರೋತ್ಸವ’ ಎಂದು ಬರೆದ ಫ್ಲೆಕ್ಸ್ ಕಿತ್ತೆಸೆದು ಬೆಂಕಿಯಲ್ಲಿ ಸುಟ್ಟ ಬಜರಂಗ ದಳ

ಕಾಂಗ್ರೆಸ್ ಅಭ್ಯರ್ಥಿಯಾಗಿ ಹಾಲಿ ವಿಧಾನಪರಿಷತ್ ಸದಸ್ಯ ಆರ್.ಪ್ರಸನ್ನಕುಮಾರ್, ಬಿಜೆಪಿಯಿಂದ ಆರ್ಯ ವೈಶ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಿ.ಎಸ್.ಅರುಣ್, ಜೆಡಿಯು ಅಭ್ಯರ್ಥಿಯಾಗಿ ಶಶಿಕುಮಾರ್ ಹಾಗೂ ಪಕ್ಷೇತರ ಅಭ್ಯರ್ಥಿಯಾಗಿ ರವಿ ಸ್ಪರ್ಧಿಸಿದ್ದರು. ಜೆಡಿಎಸ್ ತನ್ನ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಿಲ್ಲ. ಆ ಪಕ್ಷದ ಜನಪ್ರತಿನಿಧಿಗಳು ಯಾರಿಗೆ ತಮ್ಮ ಮತ ನೀಡಿದ್ದಾರೆ ಎಂಬುದು ಫಲಿತಾಂಶದ ಮೇಲೆ ಪರಿಣಾಮ ಬೀರುವ ಸಾಧ್ಯತೆಗಳಿವೆ.

ಶಿವಮೊಗ್ಗ ಜಿಲ್ಲೆಯ 7 ಹಾಗೂ ದಾವಣಗೆರೆ ಜಿಲ್ಲೆಯ ಮೂರು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿ ಒಳಗೊಂಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ವಿಧಾನಪರಿಷತ್ ಗೆ ನಡೆದ ಚುನಾವಣೆಯಲ್ಲಿ ಶೇ.99.86ರಷ್ಟು ಮತದಾನವಾಗಿತ್ತು. ಮತ ಎಣಿಕೆ ಕಾರ್ಯ ನಡೆಯುವ ಪ್ರಯುಕ್ತ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಸಹ್ಯಾದ್ರಿ ಕಾಲೇಜಿನ ವ್ಯಾಪ್ತಿಯಲ್ಲಿ ಡಿಸೆಂಬರ್ 14 ರಂದು ಬೆಳಿಗ್ಗೆ 6 ಗಂಟೆಯಿಂದ ಡಿಸೆಂಬರ್ 15 ರ ಬೆಳಿಗ್ಗೆ 6 ಗಂಟೆವರೆಗೆ ನಿಷೇಧಾಜ್ಞೆ ಜಾರಿ ಮಾಡಿ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಆದೇಶಿಸಿದ್ದಾರೆ. ಇದನ್ನೂ ಓದಿ: ಇಂಟರ್ ನ್ಯಾಷನಲ್ ಬುಕ್ ಆಫ್ ರೆಕಾರ್ಡ್ ಪುಟ ಸೇರಿದ 5 ವರ್ಷದ ಪೋರಿ

Comments

Leave a Reply

Your email address will not be published. Required fields are marked *