ಚಿಕ್ಕೋಡಿ: ಸಂಕ್ರಾಂತಿ ಹಬ್ಬ ಮುಗಿದ ಮೇಲೆ ಹೊಸ ಸರ್ಕಾರ ಅಸ್ತಿತ್ವಕ್ಕೆ ಬರುತ್ತೆ. ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರಕ್ಕೆ ಸಿದ್ದರಾಮಯ್ಯನವರೇ ಆಪರೇಷನ್ ಕುಮಾರಸ್ವಾಮಿ ಮಾಡುತ್ತಿದ್ದಾರೆ ಎಂದು ಹೇಳುವ ಮೂಲಕ ಬಿಜೆಪಿ ಶಾಸಕ ಉಮೇಶ್ ಕತ್ತಿ ಹೊಸ ಬಾಂಬ್ ಹಾಕಿದ್ದಾರೆ.
ಹುಕ್ಕೇರಿ ಪಟ್ಟಣದಲ್ಲಿ ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಅವರು, ಸಂಕ್ರಾಂತಿಯ ಬಳಿಕ ರಾಜ್ಯದಲ್ಲಿ ಹೊಸ ಸರ್ಕಾರ ಬರಲಿದ್ದು, ನಾಡಿನ ಜನತೆಗೆ ಒಳ್ಳೆಯ ಆಡಳಿತ ನೀಡುವ ಸರ್ಕಾರ ಬರುತ್ತದೆ. ಬಿಎಸ್ ಯಡಿಯೂರಪ್ಪ ಅವರ ಸರ್ಕಾರ ಒಳ್ಳೆಯ ತೀರ್ಮಾನ ತೆಗೆದುಕೊಂಡು ನಾಡಿನ ಜನತೆಗೆ ನೀಡಿರುವ ಎಲ್ಲಾ ಭರವಸೆಗಳನ್ನು ಈಡೇರಿಸುತ್ತದೆ ಎನ್ನುವ ಆಶ್ವಾಸನೆ ನೀಡಿದರು.

ಇದೇ ವೇಳೆ ಸಿದ್ದರಾಮಯ್ಯ ಅವರ ಆಪರೇಷನ್ ಕಮಲ ಟೀಕೆಗೆ ಖಾರವಾಗಿ ಪ್ರತಿಕ್ರಿಯೆ ನೀಡಿದ ಉಮೇಶ್ ಕತ್ತಿ, ಕಳೆದ 10 ವರ್ಷದಿಂದ ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿ ಇಲ್ಲ. ನಮ್ಮ ಬಳಿ ದುಡ್ಡಿಲ್ಲ ಸಿದ್ದರಾಮಯ್ಯ ಅವರು ಹೇಳಿದಷ್ಟು ಹಣವೂ ಇಲ್ಲ. ಆದರೆ ಸಿದ್ದರಾಮಯ್ಯ ಅವರು ಹೇಳುವುದನ್ನು ನೋಡಿದರೆ ಅವರೇ ಆಪರೇಷನ್ ಕುಮಾರಸ್ವಾಮಿ ಮಾಡುತ್ತಿದ್ದಾರೆ ಎನಿಸುತ್ತದೆ. ಸಮ್ಮಿಶ್ರ ಸರ್ಕಾರ ಬೀಳಿಸಲು ಸಿದ್ದರಾಮಯ್ಯ ಅವರೇ ಹಣ ನಿಯೋಜನೆ ಮಾಡುತ್ತಿದ್ದಾರೆ. ಏಕೆಂದರೆ ಕಳೆದ 5 ವರ್ಷ ಅಧಿಕಾರದಲ್ಲಿ ಬಳಿಕ ಈಗ ಅಧಿಕಾರ ಕಳೆದುಕೊಂಡಿದ್ದಾರೆ. ಅವರೇ ಸರ್ಕಾರ ಉರುಳಿಸುವ ಪ್ರಯತ್ನ ಮಾಡಿ ಬಿಜೆಪಿ ಪಕ್ಷದ ಹೆಸರನ್ನು ಲೇಪನ ಮಾಡುತ್ತಿದ್ದಾರೆ. ಸರ್ಕಾರ ಉರುಳಿಸುವ ಮುಂಚೂಣಿಯಲ್ಲಿ ಸಿದ್ದರಾಮಯ್ಯ ಅವರು ಇದ್ದಾರೆ ಎಂದು ತಿರುಗೇಟು ನೀಡಿದರು.
ಕಾಂಗ್ರೆಸ್ ಪಕ್ಷದ ಮಾಜಿ ಶಾಸಕ ರಮೇಶ್ ಜಾರಕಿಹೊಳಿ ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಅಮಿತ್ ಶಾರನ್ನು ಭೇಟಿ ಮಾಡಿರುವ ಬಗ್ಗೆ ನನಗೆ ಗೊತ್ತಿಲ್ಲ. ಇದೆಲ್ಲಾ ಊಹಾಪೋಹಗಳನ್ನು ಸಿದ್ದರಾಮಯ್ಯ ಅವರೇ ಎಬ್ಬಿಸುತ್ತಿದ್ದಾರೆ. ಶಾಸಕರಿಗೆ 25 ರಿಂದ 30 ಕೋಟಿ ರೂ. ಕೊಟ್ಟು ಅವರೇ ಸರ್ಕಾರವನ್ನು ಬೀಳಿಸುತ್ತಿದ್ದಾರೆ. ಅವರ ಈ ಪ್ರಯತ್ನಕ್ಕೆ ಧನ್ಯವಾದ ಹೇಳುತ್ತಿದ್ದೇನೆ ಎಂದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Leave a Reply