ಚಲಿಸುತ್ತಿದ್ದ ಸರ್ಕಾರಿ ಬಸ್ಸಿನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ

ಚಿತ್ರದುರ್ಗ: ಚಲಿಸುತ್ತಿದ್ದ ಸರ್ಕಾರಿ ಬಸ್ಸಿನಲ್ಲಿಯೇ ಗರ್ಭಿಣಿಯೊಬ್ಬರು ಹೆಣ್ಣು ಮಗುವಿಗೆ ಜನ್ಮ ನೀಡಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.

ಬೆಂಗಳೂರಿನಿಂದ ಕುಷ್ಟಗಿಗೆ ಹೋಗುವ ಕೆಎ28ಈ2194 ಬಸ್ಸಿನಲ್ಲಿ ತೆರಳುತ್ತಿದ್ದ ಹನುಮವ್ವ (21) ಎಂಬವರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ದಂಪತಿ ಸಮೇತ ಸರ್ಕಾರಿ ಬಸ್‍ನಲ್ಲಿ ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ಹನುಮನಗರಕ್ಕೆ ಹೋಗುವ ಸಂದರ್ಭದಲ್ಲಿ ಈ ಘಟನೆ ನಡೆದಿದೆ.

ಪ್ರಯಾಣ ಮಾಡುತ್ತಿದ್ದಾಗ ಚಿತ್ರದುರ್ಗದಲ್ಲಿ ಹನುಮವ್ವ ಅವರಿಗೆ ಹೆರಿಗೆನೋವು ಕಾಣಿಸಿಕೊಂಡಿದೆ. ತಕ್ಷಣ ಸಹಪ್ರಯಾಣಿಕರು ಚಾಲಕನಿಗೆ ವಿಷಯ ತಿಳಿಸಿದ್ದಾರೆ. ಸರಿಯಾದ ಸಮಯಕ್ಕೆ ಆಂಬುಲೆನ್ಸ್ ಬಾರದ ಕಾರಣ ಹನುಮವ್ವ ಬಸ್ಸಿನಲ್ಲೇ ಮಗುವಿಗೆ ಜನ್ಮ ನೀಡಿದ್ದಾರೆ. ಅವಧಿಗೂ ಮುನ್ನವೇ ಅಂದರೆ 7 ತಿಂಗಳಿಗೆ ಮಗು ಜನಿಸಿದ್ದು, ಮಗು ಸುಮಾರು 759 ಗ್ರಾಂ ತೂಕವಿದೆ. ಆದ್ದರಿಂದ ಮಗು ಸ್ಥಿತಿ ಚಿಂತಾಜನಕವಾಗಿದೆ.

ಸದ್ಯಕ್ಕೆ ಜಿಲ್ಲಾಸ್ಪತ್ರೆಯ ಎನ್‍ಐಸಿಯು ವಾರ್ಡನಲ್ಲಿ ಮಗುವಿನ ಆರೈಕೆ ಮಾಡಲಾಗುತ್ತಿದ್ದು, ತಾಯಿ ಹನುಮವ್ವ ಆರೋಗ್ಯದಲ್ಲಿ ಯಾವುದೇ ತೊಂದರೆ ಇಲ್ಲ ಎಂದು ವೈದ್ಯರು ತಿಳಿಸಿದ್ದಾರೆ.

Comments

Leave a Reply

Your email address will not be published. Required fields are marked *